ಗದಗ: ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿಯ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ.
ಹದ್ಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಎಂಬಾತ 10 ವರ್ಷದ ವಿದ್ಯಾರ್ಥಿ ಭರತ್ ಮೇಲೆ ಹಲ್ಲೆ ನಡೆಸಿದ್ದಾನೆ. ಶಿಕ್ಷಕನಿಂದ ಏಟು ತಿಂದ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದ, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.
ಶಿಕ್ಷಕ ಮುತ್ತಪ್ಪ ಹಡಗಲಿ ವಿದ್ಯಾರ್ಥಿ ಭರತ್ ಹಾಗೂ ಅತಿಥಿ ಸಹಶಿಕ್ಷಕಿ ಗೀತಾ ಬಾರಕೇರಿ ಮೇಲೂ ಹಲ್ಲೆ ನಡೆಸಿದ್ದಾನೆ. ಸಲಾಕೆಯಿಂದ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ. ಶಿಕ್ಷಕನ ಹುಚ್ಚಾಟಕ್ಕೆ ಈಗ ವಿದ್ಯಾರ್ಥಿಯ ಜೀವವೇ ಹೋಗಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಶಿಕ್ಷಕನ ಹಲ್ಲೆಗೆ ಕಾರಣ ತಿಳಿದುಬಂದಿಲ್ಲ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.