ಆನಂದ ಮಾಮನಿ ಅಂತಿಮ ದರ್ಶನ ಪಡೆದ ಸಿಎಂ

ಆನಂದ
Advertisement

ಬೆಳಗಾವಿ: ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾದ ಕರ್ನಾಟಕ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸರಕಾರದ ಪರವಾಗಿ ಅಂತಿಮ ನಮನ ಸಲ್ಲಿಸಿದರು.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲವು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಉಪಸಭಾಧ್ಯಕ್ಷ ಆನಂದ ಮಾಮನಿ(56) ಅವರು ಶನಿವಾರ ರಾತ್ರಿ ನಿಧನರಾಗಿದ್ದರು.
ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ತಾಲ್ಲೂಕು ಕ್ರೀಡಾಂಗಣದಲ್ಲಿ ಮಾಮನಿಯವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ಬೆಂಗಳೂರಿನಿಂದ ಆಗಮಿಸಿದ ಸಿಎಂ ಅಂತಿಮ ದರ್ಶನ ಪಡೆದುಕೊಂಡು ಸರ್ಕಾರದ ಪರವಾಗಿ ಅಂತಿಮ ನಮನ ಸಲ್ಲಿಸಿದರು. ಇದಕ್ಕೂ ಮುಂಚೆ ಮಾಮನಿಯವರ ತಾಯಿ ಗಂಗಮ್ಮ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸಚಿವರಾದ ಮುರುಗೇಶ್ ನಿರಾಣಿ, ಸಿ.ಸಿ. ಪಾಟೀಲ ಮತ್ತಿತರರು ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಸಮರ್ಪಿಸಿ ಅಂತಿಮ ನಮನ ಸಲ್ಲಿಸಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ, ಸಂಸದರಾದ ಮಂಗಳ ಅಂಗಡಿ, ಈರಣ್ಣ ಕಡಾಡಿ, ಶಾಸಕರಾದ ಮಹೇಶ ಕುಮಠಳ್ಳಿ, ಮಹಾಂತೇಶ ದೊಡ್ಡಗೌಡರ, ಮಹಾದೇವಪ್ಪ ಯಾದವಾಡ, ದುರ್ಯೋಧನ ಐಹೊಳೆ, ಮಹಾಂತೇಶ ಕೌಜಲಗಿ, ಸಿದ್ದು ಸವದಿ, ಅಮೃತ ದೇಸಾಯಿ, ಅರವಿಂದ ಬೆಲ್ಲದ, ಸಿ.ಎಂ. ನಿಂಬಣ್ಣವರ, ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಪ್ರಕಾಶ ಹುಕ್ಕೇರಿ, ಲಕ್ಷ್ಮಣ ಸವದಿ, ಕಾಡಾ ಅಧ್ಯಕ್ಷ ಡಾ.ವಿ.ಐ. ಪಾಟೀಲ, ಮಾಜಿ ಶಾಸಕ ಅಶೋಕ ಪಟ್ಟಣ ಸೇರಿದಂತೆ ಅನೇಕ ಜನಪ್ರತಿನಿಧಿಗಳು, ವಿವಿಧ ಮಠಾಧೀಶರು ಹಾಗೂ ಗಣ್ಯರು ಅಂತಿಮ ದರ್ಶನ ಪಡೆದುಕೊಂಡರು.