ದಾವಣಗೆರೆ: ದಾವಣಗೆರೆ ಉತ್ತರ ಮತ್ತು ದಕ್ಷಿಣದಿಂದ ಸೋಮವಾರ ಕಾಂಗ್ರೆಸ್ ಅಭ್ಯರ್ಥಿಗಳಾದ ಅಪ್ಪ-ಮಗ ಅದ್ಧೂರಿಯಾಗಿ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು.
ದಾವಣಗೆರೆ ದಕ್ಷಿಣದಿಂದ ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ದಾವಣಗೆರೆ ಉತ್ತರಕ್ಕೆ ಅದ್ಧೂರಿ ಮೆರವಣಿಗೆ ಮೂಲಕ ಮಹಾನಗರ ಪಾಲಿಕೆಯಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಎಸ್.ಎಸ್. ಮಲ್ಲಿಕಾರ್ಜುನ್, ತಾವು ಅಧಿಕಾರದಲ್ಲಿದ್ದಾಗ ಮಾಡಿದ ಅಭಿವೃದ್ಧಿ ಕೆಲಸಗಳು ನಮಗೆ ಈ ಚುನಾವಣೆಯಲ್ಲಿ ಕೈ ಹಿಡಿಯಲಿವೆ ಎಂಬ ಭರವಸೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಐದು ವರ್ಷಗಳ ಅವಧಿಯಲ್ಲಿ ದಾವಣಗೆರೆ ಉತ್ತರದಲ್ಲಿ ಯಾವೊಂದು ಅಭಿವೃದ್ಧಿ ಕಾರ್ಯಗಳು ನಡೆಯದೆ ನಾವು ಮಾಡಿಟ್ಟ ಕೆಲಸಗಳೇ ಮುಂದುವರೆದಿವೆಯಷ್ಟೇ. ಇದನ್ನೆಲ್ಲಾ ಗಮನಿಸಿರುವ ಜನತೆ ನಮಗೆ ಮತ ನೀಡಿ ಈ ಬಾರಿ ಗೆಲ್ಲಿಸುತ್ತಾರೆ ಎನ್ನುವ ನಂಬಿಕೆಯಿದೆ ಎಂದರು. ಈ ಸಂದರ್ಭದಲ್ಲಿ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.