ಕರ್ನಾಟಕದ ಯಾವುದೇ ಪ್ರದೇಶ
ಬದಲಾವಣೆ ಆಗಲ್ಲ: ಸಿಎಂ ಬೊಮ್ಮಾಯಿ

Advertisement

ದಾವಣಗೆರೆ: ಮಹಾರಾಷ್ಟ್ರ ಗಡಿ ವಿವಾದ ಹಿನ್ನಲೆಯಲ್ಲಿ ೨೦೦೪ ರಲ್ಲಿ ಹೂಡಿದ ದಾವೆಗೆ ಯಾವುದೇ ಕಾನೂನು ಮಾನ್ಯತೆ ಇಲ್ಲ. ಈ ವಾದಕ್ಕೆ ಹೆಚ್ಚಿನ ಒತ್ತು ನೀಡಿ ರಾಜ್ಯ ಸರ್ಕಾರ ಸರ್ವೋಚ್ಚ ನ್ಯಾಯಾಲಯದಲ್ಲಿ ಸಮರ್ಥ ಕಾನೂನು ಹೋರಾಟಕ್ಕೆ ಸಿದ್ದತೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಪುನವಿಂಗಡಣಾ ಕಾಯ್ದೆ ಮತ್ತು ಸಂವಿಧಾನ ೩ನೇ ವಿಧಿ ಅನುಸಾರ ಮಹಾರಾಷ್ಟ್ರ ೨೦೦೪ರಲ್ಲಿ ಹೂಡಿದ ದಾವೆಗೆ ಯಾವುದೇ ಕಾನೂನು ಮಾನ್ಯತೆ ಇಲ್ಲ. ನಮ್ಮ ಸರ್ಕಾರ ಕಾನೂನು ಹೋರಾಟಕ್ಕೆ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅವರನ್ನು ನೇಮಿಸಿದೆ. ನಾವು ಸಂವಿಧಾನ ಹಾಗೂ ಕಾನೂನು ಬದ್ದವಾಗಿ ಇದ್ದೇವೆ. ಕರ್ನಾಟಕದ ರಾಜ್ಯದ ಭೂ ಪ್ರದೇಶದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಬೇಡಿಕೆ ಹಾಗೂ ನಿಲುವುಗಳನ್ನು ವಿಚಾರಣೆ ಸಂದರ್ಭದಲ್ಲಿ ಮಂಡಿಸಲಾಗುವುದು. ಈ ಸಂಬಂಧವಾಗಿ ಮುಂದಿನ ವಾರ ಸರ್ವಪಕ್ಷ ಹಾಗೂ ಕಾನೂನು ತಜ್ಞರ ಸಭೆ ಕರೆಯಲಾಗಿದ್ದು, ಯಾವ ವಿಚಾರವನ್ನು ಮಂಡಿಸಬೇಕು ಎಂಬುದರ ಕುರಿತು ಕೂಲಂಕುಷವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಾಗುವುದು ಎಂದರು.

ಮಹಾರಾಷ್ಟ್ರ ಹಿರಿಯ ರಾಜಕಾರಣಿ ಶರದ್ ಪವಾರ್ ಬೆಳಗಾವಿ ಗಡಿ ವಿವಾದ ಇಟ್ಟುಕೊಂಡು ಇದುವರೆಗೂ ರಾಜಕೀಯ ಮಾಡಿದ್ದಾರೆ. ಬೆಳಗಾವಿ ಬಗೆಗಿನ ಅವರ ಕನಸ ನನಸಾಗಿಲ್ಲ, ಮುಂದೆಯೂ ನನಸಾಗುವುದಿಲ್ಲ. ಮಹಾರಾಷ್ಟ್ರ ಜತ್ತ ಭಾಗದ ಜನರು ಕರ್ನಾಟಕದಲ್ಲಿ ವಿಲೀನವಾಗಲು ಬಹುದಿನಗಳಿಂದ ಬೇಡಿಕೆ ಇಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ,ಸಂಸದ ಜಿ.ಎಂ.ಸಿದ್ದೇಶ್ವರ, ಜಿಲ್ಲಾಧಿಕಾರಿ ಶಿವಾನಂದ ಕಪಾಶಿ, ಜಿ.ಪಂ. ಸಿಇಓ ಡಾ.ಚೆನ್ನಪ್ಪ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮತ್ತಜ್ಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಉಪವಿಭಾಗಧಿಕಾರಿ ದುರ್ಗಶ್ರೀ ಮತ್ತಿತರು ಉಪಸ್ಥಿತರಿದ್ದರು.