ಧಾರವಾಡ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಷಯಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರವು ಮಧ್ಯಸ್ಥಿಕೆ ವಹಿಸಿ ಸೌಹಾರ್ದಯುತವಾಗಿ ಬಗೆಹರಿಸಲು ಮುಂದಾಗದಿದ್ದರೆ ಹೋರಾಟ ರೂಪಿಸಲಾಗುವುದು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘ ಎಚ್ಚರಿಕೆ ನೀಡಿದೆ.
ಸಂಘದ ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೇರಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕದಲ್ಲಿ, ಮಹಾರಾಷ್ಟ್ರದಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಸಮಸ್ಯೆ ಬಗೆಹರಿಸುವದು ದೊಡ್ಡ ಸಮಸ್ಯೆಯಲ್ಲ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದರು.
ಮಹಾಜನ ವರದಿಯಲ್ಲಿ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದೆಂಬುದನ್ನು ಸ್ಪಷ್ಟಪಡಿಸಲಾಗಿದೆ. ಆದರೂ ಮಹಾರಾಷ್ಟ್ರದಲ್ಲಿ ರಾಜಕೀಯ ಸಮಸ್ಯೆಗಳು ಉದ್ಭವಿಸಿದ ಸಂದರ್ಭದಲ್ಲಿ ಕೆಲ ರಾಜಕಾರಣಿಗಳು ಗಡಿ ವಿವಾದ ಕೆದಕುತ್ತ ಬಂದಿದ್ದಾರೆ. ಮಹಾರಾಷ್ಟ್ರದ ಕಿಡಿಗೇಡಿಗಳ ಪುಂಡಾಟಿಕೆಯನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಕರ್ನಾಟಕ, ಮಹಾರಾಷ್ಟ್ರದಲ್ಲಿ ಎಲ್ಲಿಯೇ ಆಸ್ತಿಪಾಸ್ತಿ ಹಾನಿಯಾದರೆ ಇಡೀ ದೇಶಕ್ಕೆ ಹಾನಿ ಎಂಬುದನ್ನು ಮನಗಂಡು ಕ್ರಮ ಕೈಗೊಳ್ಳಬೇಕು ಎಂದರು.
ಗಡಿ ಕುರಿತು ಮುಖ್ಯಮಂತ್ರಿ ಕರೆದ ಸರ್ವಪಕ್ಷಗಳ ಸಭೆಗೆ ವಿಷಯ ತಜ್ಞರು, ಚಿಂತಕರನ್ನು ಆಹ್ವಾನಿಸಬೇಕು. ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.