ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ೧೨೦ಕ್ಕೂ ಅಧಿಕ ಸ್ಥಾನ ಗೆಲ್ಲಲಿದೆ

Advertisement

ಕುಷ್ಟಗಿ: ಮುಂಬರುವ 2023 ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ೧೨೦ ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವುದರ ಮೂಲಕ ರಾಜ್ಯದ ಅಧಿಕಾರ ಚುಕ್ಕಾಣೆ ಹಿಡಿಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ತಾಲೂಕಿನ ತಾವರಗೇರಾ ಪಟ್ಟಣದ ಮಾಲಿ ಪಾಟೀಲ್ ಬಂಧುಗಳ ಮದುವೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸಮೀಕ್ಷೆ ನಡೆಸಲಾಗಿತ್ತು ಆ ಸಮೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ಸಮೀಕ್ಷೆ ವರದಿ ಬಂದಿದ್ದು, ಆ ವರದಿ ಅನುಸಾರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಆಶೀರ್ವಾದ ಮಾಡಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಇನ್ನೇನು ಕೆಲವೇ ತಿಂಗಳಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರ ನಡೆಸಲಿದೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.
ಕೇಂದ್ರ ರಾಜ್ಯ ಸರ್ಕಾರಗಳ ವೈಫಲ್ಯ: ಕೇಂದ್ರ ಮತ್ತು ರಾಜ್ಯ ಸರ್ಕಾರ ಜನ ವಿರೋಧಿ ಸರ್ಕಾರವಾಗಿದ್ದು, ಜನರಿಗೆ ಉಪಯೋಗವಾಗುವಂತಹ ಯೋಜನೆಗಳನ್ನು ಜಾರಿಗೆ ತರುವ ಬದಲು, ಎಲ್ಲಾ ಅಗತ್ಯತೆ ವಸ್ತುಗಳ ಮೇಲೆ ದುಪ್ಪಟ್ಟು ದರ ಮಾಡುವುದರ ಮೂಲಕ ಶ್ರೀಸಾಮಾನ್ಯರ ಹೊಟ್ಟಿಯ ಮೇಲೆ ಬರೆ ಎಳೆದಂತಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸಾಕಷ್ಟು ಬಾರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯ ಕುರಿತು ಜನರಿಗೆ ತಿಳಿಪಡಿಸಲಾಗಿದೆ ಎಂದರು.
ಪ್ರಜಾ ಧ್ವನಿಯಾತ್ರೆ ಯಿಂದ ಸಂಘಟನೆ: ರಾಜ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಪಕ್ಷದ ವತಿಯಿಂದ ಹಲವಾರು ಸಮಾವೇಶಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮತದಾರರಿಗೆ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಮನವರಿಕೆ ಮಾಡಿಕೊಡಲಾಗಿದೆ. ಜೊತೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಮುಖಂಡರು ಒಳಗೊಂಡಂತೆ ಪ್ರಜಾಧ್ವನಿ ಯಾತ್ರೆಯ ಮೂಲಕ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.
ಮತ್ತೊಮ್ಮೆ ಬಯ್ಯಾಪೂರ ಗೆಲ್ಲಿಸಿ: ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ದಿನದ 24 ತಾಸುಗಳ ಕಾಲ ಕೆಲಸ ಮಾಡುವ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರನ್ನು ಮುಂದಿನ 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಿಸುವುದರ ಮೂಲಕ ಮತ್ತೊಮ್ಮೆ ಶಾಸಕರನ್ನಾಗಿ ಆಯ್ಕೆ ಮಾಡುವ ಜವಾಬ್ದಾರಿ ಪಕ್ಷದ ಕಾರ್ಯಕರ್ತರ ಮೇಲೆ ಇದೆ.ಕ್ಷೇತ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರ ಶ್ರಮಿಸಬೇಕು ಅಂದಾಗ ಮಾತ್ರ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು. ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಮಾಜಿ ಸಚಿವ ಶಿವರಾಜ ತಂಗಡಗಿ ಶಾಸಕ,ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ, ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪುರ ಸೇರದಂತೆ ಇನ್ನಿತರ ಇದ್ದರು