ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆ: ಸೋಮಶೇಖರರೆಡ್ಡಿ

Somashekhar Reddy
Advertisement

ಬಳ್ಳಾರಿ: ಮುಂಬರುವ 2023ರ ವಿಧಾನಸಭೆ ಚುನಾವಣೆಯೊಳಗೆ ಜಿಲ್ಲೆಯ ಮೂರ್ನಾಲ್ಕು ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ತಿಳಿಸಿದರು.
ನಗರದ ಗಡಿಗ ಚನ್ನಪ್ಪ ವೃತ್ತದಲ್ಲಿ ಮಾಜಿ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿದ್ದ ಶಾಸಕ ನಾಗೇಂದ್ರ ಅವರೇ ಸಚಿವ ರಾಮುಲು ಅವರನ್ನು ಕಾಂಗ್ರೆಸ್‌ಗೆ ಏಕೆ ಕರೆಯುತ್ತಾರೊ ಗೊತ್ತಿಲ್ಲ. ಆದರೆ, ಕಾಂಗ್ರೆಸ್ ಪಕ್ಷದ ಮೂರ್ನಾಲ್ಕು ಶಾಸಕರು ಬಿಜೆಪಿ ಸೇರುವ ಕುರಿತು ಚರ್ಚೆಗಳು ನಡೆಯುತ್ತಿರುವ ಬಗ್ಗೆ ನನ್ನ ಗಮನಕ್ಕಿದೆ. ಯಾರ್ಯಾರು ಎಂಬುದನ್ನು ಅವರ ಹೆಸರು ಈಗ ಹೇಳೋಕೆ ಹೋಗಲ್ಲ. ಈ ಮೂಲಕ ಈ ಹಿಂದೆ ಮಾಜಿ ಸಚಿವ ಜನಾರ್ಧನರೆಡ್ಡಿ ಅವಧಿಯಲ್ಲಿ ಇದ್ದಂತೆ ಮುಂದಿನ ಚುನಾವಣೆಯಲ್ಲೂ ಜಿಲ್ಲೆಯಲ್ಲಿ 10 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ಭವಿಷ್ಯ ನುಡಿದರು.
ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆ ಬಹಿರಂಗ ಸಮಾವೇಶಕ್ಕೂ ಮುನ್ನವೇ ಕಾಂಗ್ರೆಸ್ ಶಾಸಕರು, ಬಿಜೆಪಿ ಸೇರಲಿದ್ದಾರೆ. ಕಾಂಗ್ರೆಸ್ ಮುಳುಗುವ ಹಡಗು. ಬಿಜೆಪಿಯವರು ಆ ಪಕ್ಷಕ್ಕೆ ಸೇರುವ ಪ್ರಶ್ನೆಯೇ ಇಲ್ಲ. ನಾಗೇಂದ್ರ ಅವರು ಸುಳ್ಳು ಆರೋಪ ಮಾಡಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದರು.
ಮಾಜಿ ಸಚಿವ ಜನಾರ್ಧನರೆಡ್ಡಿ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.