ಕೆಲಸಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ

ನೆಟ್ಟಾರು
Advertisement

ಮಂಗಳೂರು: ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಇಂದು ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿ ಹುದ್ದೆಗೆ ನೂತನ ಕುಮಾರಿ ಕರ್ತವ್ಯಕ್ಕೆ ಹಾಜರಾದರು. ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ನೂತನ ಕುಮಾರಿ ನೇಮಕಾತಿ ಆದೇಶ ಪತ್ರ ಹಾಗೂ ಅಗತ್ಯ ದಾಖಲೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.
ಮುಖ್ಯಮಂತ್ರಿ ಕಚೇರಿಯ ಆದೇಶ ಪ್ರಕಾರ ನೂತನ ಕುಮಾರಿ ಅವರನ್ನು ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿ ಪರಿಹಾರ ನಿಧಿ ವಿಭಾಗದಲ್ಲಿ ಕರ್ತವ್ಯಕ್ಕೆ ಸೇರ್ಪಡೆಗೊಳಿಸಲಾಗಿದೆ. ಅವರು ಇಂದಿನಿಂದಲೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ತುರ್ತು ಕೆಲಸದ ಹಿನ್ನೆಲೆಯಲ್ಲಿ ರಜೆಯಲ್ಲಿದ್ದು, ಅ.೧೭ರಿಂದ ಕಾಯಂ ಆಗಿ ಕರ್ತವ್ಯಕ್ಕೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಅವರಿಗೆ ಪ್ರತ್ಯೇಕ ಕ್ಯಾಬಿನ್‌ನಲ್ಲಿ ಎಲ್ಲ ವಿಭಾಗದಂತೆ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.
ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಚಿಕನ್ ಸ್ಟಾಲ್ ಹೊಂದಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಜುಲೈ ೨೬ರಂದು ದುಷ್ಕರ್ಮಿಗಳು ಹತ್ಯೆ ನಡೆಸಿದ್ದರು.
ಕುಟುಂಬದ ಆಧಾರಸ್ತಂಭವಾಗಿದ್ದ ಪ್ರವೀಣ್ ಮೃತಪಟ್ಟ ಹಿನ್ನೆಲೆಯಲ್ಲಿ ಆತನ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ಸರಕಾರಿ ಉದ್ಯೋಗ ಕೊಡಿಸುವ ಬಗ್ಗೆ ಸ್ಥಳೀಯ ಬಿಜೆಪಿ ಮುಖಂಡರು ಮುಖ್ಯಮಂತ್ರಿಯನ್ನು ವಿನಂತಿಸಿದ್ದರು. ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪ್ರವೀಣ್ ನೆಟ್ಟಾರು ಪತ್ನಿಗೆ ಸಿಎಂ ಸಚಿವಾಲಯದಲ್ಲಿ ಕೆಲಸ ಕೊಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು. ಅದರಂತೆ ಸಿಎಂ ಸಚಿವಾಲಯದಲ್ಲಿನ ಗ್ರೂಪ್ ಸಿ ಹುದ್ದೆಗೆ ಕರ್ನಾಟಕ ನಾಗರಿಕ ಸೇವಾ(ಸಾಮಾನ್ಯ ನೇಮಕಾತಿ) ನಿಯಮಾವಳಿ, ೧೯೭೭ರ ನಿಯಮ ೧೫,೧(ಬಿ)(೧)ರ ಪ್ರಕಾರ ಸೆ.೨೯ರಂದು ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೇಮಕಾತಿ ಆದೇಶ ಹೊರಡಿಸಿದ್ದರು.