ಜನವರಿ 12 ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ: ಉದ್ಘಾಟನೆಗೆ ಪ್ರಧಾನಿ-ಮುಖ್ಯಮಂತ್ರಿ ಬೊಮ್ಮಾಯಿ

Advertisement

ಬೆಳಗಾವಿ: ಈ ಬಾರಿ ರಾಷ್ಟ್ರೀಯ ಯುವಜನೋತ್ಸವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಸಲಾಗಿದ್ದು, ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಇಂದು ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಎಲ್ಲ ರಾಜ್ಯಗಳಿಂದ ಸುಮಾರು 7.5 ಸಾವಿರ ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದು, ವಸತಿ ಸೌಕರ್ಯ ಮತ್ತು ವೇದಿಕೆಗಳನ್ನು ಸಿದ್ಧ ಪಡಿಸಲು ಸೂಚನೆ ನೀಡಲಾಗಿದೆ.
ಕರ್ನಾಟಕ ರಾಜ್ಯಕ್ಕೆ ಈ ಅವಕಾಶ ದೊರೆತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಯುವ ಸಬಲೀಕರಣ ಸಚಿವ ಅನುರಾಗ್ ಠಾಕೂರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದರು.
ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕ್ರೀಡಾ ಸಚಿವರಾದ ನಾರಾಯಣಗೌಡರು, ಕಂದಾಯ ಸಚಿವ ಆರ್. ಅಶೋಕ್, ನಗರಾಭಿವೃದ್ಧಿ ಸಚಿವ ಬಸವರಾಜ ಬೈರತಿ, ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಇಲಾಖಾ ಕಾರ್ಯದರ್ಶಿಗಳೂ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಕೋವಿಡ್ ನಿಯಂತ್ರಣ-ನಾಳೆ ಸಭೆ:
ಕೋವಿಡ್ ಹೆಚ್ಚುತ್ತಿರುವ ಬಗ್ಗೆ ರಾಜ್ಯ ಗಂಭೀರವಾಗಿ ತೆಗೆದುಕೊಂಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿನ ಬೆಳವಣಿಗೆಗಳು, ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಗಳು, ಯಾವ ರೀತಿ ಪರೀಕ್ಷೆಗಳು ಹೆಚ್ಚಿಸಬೇಕು. ಜಿನೊಮೆಟಿಕ್ ಪರೀಕ್ಷೆ ಮಾಡುವ ಬಗ್ಗೆ, ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸುದೀರ್ಘವಾದ ಕಾರ್ಯಕ್ರಮ ರೂಪಿಸಲು ನಾಳೆ ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದರು.