ಹುಬ್ಬಳ್ಳಿ: ವಿದ್ಯಾರ್ಥಿಗಳು ಪರೀಕ್ಷೆ ಬಗ್ಗೆ ಒತ್ತಡ ತೆಗೆದುಕೊಳ್ಳಬಾರದು. ಜೀವನದ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು ಮುಂದಾಗಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಧಾನಮಂತ್ರಿಗಳ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಜಿಪಂ, ಶಿಕ್ಷಣ ಇಲಾಖೆ ವತಿಯಿಂದ ಆಯ್ದ ಮಕ್ಕಳನ್ನು ಕರೆದುಕೊಂಡು ಬಂದು ವೀಕ್ಷಣೆ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಕೇವಲ ಮಕ್ಕಳ ಪತ್ರಿಭಾ ಪರೀಕ್ಷೆಯಲ್ಲದೆ, ಒಟ್ಟಾರೆಯಾಗಿ ವಿಕಾಸ ಆಗಬೇಕು ಎಂಬುದು ಅವರ ಚಿಂತನೆಯಾಗಿದೆ ಎಂದರು.
ವಿದ್ಯಾರ್ಥಿಗಳು ಒಳ್ಳೆಯ ಪ್ರಯತ್ನ ಮಾಡಿ ಜೀವನವನ್ನು ರೂಪಿಸಿಕೊಳ್ಳಬೇಕಾಗಿದೆ. ಪ್ರಧಾನಮಂತ್ರಿಗಳ ಮಾತುಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ದೊರೆಯಲಿದೆ. ಜೀವನದಲ್ಲಿ ಜಿಗುಪ್ಸೆ ಹೊಂದದೇ, ಉತ್ಸಾಹದಿಂದ ಮುನ್ನುಗ್ಗಬೇಕು. ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿದ್ದ ಎಕ್ಸಾಂ ವಾರಿಯರ್ ಪುಸ್ತಕವನ್ನು ಕನ್ನಡಕ್ಕೆ ಭಾಷಾಂತರಿಸಿ ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿದೆ ಎಂದರು.