ಕುಷ್ಟಗಿ: ಮುಂಬರುವ ೨೦೨೩ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಕುಷ್ಟಗಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವ ಅಭ್ಯರ್ಥಿ ತುಕಾರಾಮ ಸುರ್ವೇ, ಜೆಡಿಎಸ್ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಮಿತಿ ಕಾರ್ಯದರ್ಶಿ ಶರಣಪ್ಪ ಕುಂಬಾರ ಪಕ್ಷದ ನಿಷ್ಠಾವಂತ ಮುಖಂಡರಿಗೆ ಕಾರ್ಯಕರ್ತರಿಗೆ ಬೆಲೆ ಕೊಡದೆ ನಿರ್ಲಕ್ಷಿಸಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಜೆಡಿಎಸ್ ಪಕ್ಷದ ಮಾಜಿ ತಾಲೂಕಾಧ್ಯಕ್ಷ ಬಸವರಾಜ ನಾಯಕ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ತನ್ನ ಅಸ್ತಿತ್ವ ಕಳೆದುಕೊಂಡಿತ್ತು. ಇಂತಹ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಅಮರೇಗೌಡ ಪಾಟೀಲ, ಜೆಡಿಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿ.ಎಂ. ಹಿರೇಮಠ ಹಾಗೂ ನಾವುಗಳು ಸೇರಿ ಕ್ಷೇತ್ರಾದ್ಯಂತ ಪ್ರತಿಯೊಂದು ಗ್ರಾಮಗಳಿಗೆ ತೆರಳಿ ಬೇರು ಮಟ್ಟದಿಂದ ಜೆಡಿಎಸ್ ಪಕ್ಷವನ್ನು ಬಲಪಡಿಸಿದ್ದೇವೆ ಯಾರದೋ ಮಾತು ಕೇಳಿ ಪಕ್ಷದ ಅಭ್ಯರ್ಥಿ ನಮ್ಮನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ ಎಂದರು.
ತುಕಾರಾಮ ಹಾಗೂ ಶರಣಪ್ಪ ಕುಂಬಾರ್ ಅವರು ಏಕಪಕ್ಷಿಯ ನಿರ್ಧಾರ ತೆಗೆದುಕೊಳ್ಳುತ್ತಿರುವುದರಿಂದ ಜೆಡಿಎಸ್ ಪಕ್ಷದ 150ಕ್ಕೂ ಹೆಚ್ಚು ಕಾರ್ಯಕರ್ತರು ಮುಂದಿನ ದಿನಗಳಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಸಾಮೂಹಿಕ ರಾಜೀನಾಮೆ ನೀಡುವುದರ ಮೂಲಕ ಬೇರೆ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದೇವೆ, ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.