ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ 150 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಜ. 15ರೊಳಗೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಟಿಕೆಟ್ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಥಮ ಹಂತದಲ್ಲಿ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ
ಮಾಡಲಾಗುವುದು. ಇಲ್ಲವೇ ಅಂತಹ ಅಭ್ಯರ್ಥಿಗಳಿಗೆ ಚುನಾವಣೆ ಸ್ಪರ್ಧೆಗೆ ತಯಾರು ಮಾಡುವಂತೆ ಸೂಚನೆ ನೀಡಲಾಗುವುದು. ಈಗಾಗಲೇ ಎಲ್ಲ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಿದ ಆಕಾಂಕ್ಷಿಗಳನ್ನು ಬ್ಲಾಕ್ ಅಧ್ಯಕ್ಷರು,
ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರನ್ನು ಕರೆಸಿ ಅಭಿಪ್ರಾಯ ಸಂಗ್ರಹಿಸುವ ಪ್ರಕ್ರಿಯೆ ಆರಂಭವಾಗಿದೆ. ಡಿಸೆಂಬರ್ ಅಂತ್ಯದೊಳಗೆ ಈ ಪ್ರಕ್ರಿಯೆ ಮುಕ್ತಾಯಗೊಳಿಸಿ ಕೆಪಿಸಿಸಿ ಅಧ್ಯಕ್ಷರಿಗೆ ವರದಿಯನ್ನು ರವಾನಿಸಲಾಗುತ್ತದೆ. ಅಲ್ಲಿ ಅಂತಿಮ ಪಟ್ಟಿ ಸಿದ್ಧಪಡಿಸಲಾಗುತ್ತದೆ. ಆ ಬಳಿಕವೇ ಅಭ್ಯರ್ಥಿಗಳ ಘೋಷಣೆಗೆ ಚಾಲನೆ ಸಿಗಲಿದೆ ಎಂದರು.
ರಾಜ್ಯದಲ್ಲಿ 224 ಕ್ಷೇತ್ರಗಳಿಗೆ 1,350 ಅರ್ಜಿಗಳು ಸಲ್ಲಿಕೆಯಾಗಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಈಗಾಗಲೇ ಮೂರು ಬಾರಿ ಆಂತರಿಕ ಸಭೆ ನಡೆಸಲಾಗಿದೆ. ಇದರ ವರದಿ ಪ್ರಕಾರ 130 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಂಚೂಣಿಯಲ್ಲಿದೆ. ನಮ್ಮ ಗುರಿ 150 ಸೀಟು ಗೆಲ್ಲುವುದು. ರಾಹುಲ್‌ಗಾಂಧಿ ಅವರ ಮಾರ್ಗದರ್ಶನದಂತೆ ಎಐಸಿಸಿ ಸೂಚನೆಯಂತೆ ರಾಜ್ಯದಲ್ಲಿ ಹೋರಾಟವೇ ಮೊದಲಾದ ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.