ಲಂಡನ್: ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಉಪನ್ಯಾಸದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭಾರತೀಯ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿ ನಡೆಯುತ್ತಿದೆ. ಇಸ್ರೇಲ್ ಸ್ಪೈವೇರ್ ಪೆಗಾಸಸ್ ನನ್ನ ಫೋನ್‌ನಲ್ಲೂ ಇದೆ ಎಂದು ಕೇಂದ್ರದ ವಿರುದ್ಧ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ನಾಯಕ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಮಾಜಿ ಸಲಹೆಗಾರ ಸ್ಯಾಮ್ ಪಿತ್ರೋಡಾ, ಕೇಂಬ್ರಿಡ್ಜ್ ಜಡ್ಜ್ ಬ್ಯುಸಿನೆಸ್ ಸ್ಕೂಲ್‌ನಲ್ಲಿ ಎಂಬಿಎ ವಿದ್ಯಾರ್ಥಿಗಳಿಗೆ ರಾಹುಲ್ ಗಾಂಧಿ ಮಾಡಿದ ಭಾಷಣದ ಯೂಟ್ಯೂಬ್ ಲಿಂಕ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ನಿಮ್ಮ ಫೋನ್ ಕರೆಗಳು ರೆಕಾರ್ಡ್ ಆಗಿತ್ತಿದೆ. ಫೋನ್‌ನಲ್ಲಿ ಮಾತನಾಡುವಾಗ ಜಾಗರೂಕರಾಗಿರಿ ಎಂದು ಗುಪ್ತಚರ ಅಧಿಕಾರಿಗಳು ನನಗೆ ಎಚ್ಚರಿಕೆ ನೀಡಿದ್ದಾರೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. “ನಾನೇ ನನ್ನ ಫೋನ್‌ನಲ್ಲಿ ಪೆಗಾಸಸ್ ಹೊಂದಿದ್ದೇನೆ. ಹೆಚ್ಚಿನ ಸಂಖ್ಯೆಯ ರಾಜಕಾರಣಿಗಳ ಫೋನ್‌ಗಳಲ್ಲಿ ಪೆಗಾಸಸ್ ಇತ್ತು. ಜಾಗರೂಕರಾಗಿರಿ ಎಂದು ಗುಪ್ತಚರ ಅಧಿಕಾರಿಗಳು ನನಗೆ ಎಚ್ಚರಿಸಿದ್ದಾರೆ” ಎಂದು ಹೇಳಿದ್ದಾರೆ. ಭಾರತೀಯ ಪ್ರಜಾಪ್ರಭುತ್ವ ಆಕ್ರಮಣಕ್ಕೆ ಒಳಗಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಪ್ರಜಾಪ್ರಭುತ್ವಕ್ಕೆ ಅಗತ್ಯವಿರುವ ಸಾಂಸ್ಥಿಕ ಚೌಕಟ್ಟಾದ ಸಂಸತ್ತು, ಮಾಧ್ಯಮ, ನ್ಯಾಯಾಂಗವನ್ನೂ ನಿರ್ಬಂಧಿಸಲಾಗುತ್ತಿದೆ. ಹಾಗಾಗಿ, ಭಾರತೀಯ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿ ನಡೆಯುತ್ತಿದೆ ಎಂದು ಕೇಂದ್ರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ರಾಜಕಾರಣಿಗಳು ಮತ್ತು ಇತರರ ಮೇಲೆ ಬೇಹುಗಾರಿಕೆ ನಡೆಸಲು ಸರ್ಕಾರ ಪೆಗಾಸಸ್ ಕುತಂತ್ರಾಂಶ ಬಳಸುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಕಳೆದ ವರ್ಷದ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ಸಮಿತಿಯನ್ನು ರಚಿಸಿತ್ತು.