ಕುಷ್ಟಗಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಒಂದಾದ ನಮ್ಮ ಕ್ಲಿನಿಕ್ ಯೋಜನೆ ಉತ್ತಮವಾಗಿದೆ. ಜನರ ಆರೋಗ್ಯ ಕಾಪಾಡಲು ಇದು ಸಹಕಾರಿ. ಮುಂದಿನ ದಿನಮಾನಗಳಲ್ಲಿ ನಮ್ಮ ಕ್ಲಿನಿಕ್ ಕಾರ್ಯವೈಖರಿಯ ಸಾಧಕ ಬಾಧಕಗಳನ್ನು ನೋಡಬೇಕಾಗುತ್ತದೆ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದರು.
ಪಟ್ಟಣದ ತಗ್ಗಿನ ಓಣಿಯ ವಾರ್ಡ್ 22ರ ವೀರೇಶ ಪಟ್ಟಣಶೆಟ್ಟರ ಅವರ ನಿವಾಸದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಸಾರ್ವಜನಿಕ ಆಸ್ಪತ್ರೆಯ ಸಹಯೋಗದೊಂದಿಗೆ 15ನೇ ಹಣಕಾಸು ಯೋಜನೆ ಅಡಿಯಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸಿ ಅವರು ಮಾತನಾಡಿದರು.
ಬೆಂಗಳೂರು ಬಿಬಿಎಂಪಿ ಸೇರಿದಂತೆ ರಾಜ್ಯದಲ್ಲಿ 438 ನಮ್ಮ ಕ್ಲಿನಿಕ್ಗೆ ಚಾಲನೆ ನೀಡಲಾಗುತ್ತಿದೆ. ವಿಶೇಷವಾಗಿ ಸಾಂಕೇತಿಕವಾಗಿ 114 ನಮ್ಮ ಕ್ಲಿನಿಕ್ಗೆ ಚಾಲನೆ ನೀಡುವ ಮೂಲಕ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಚಿಕಿತ್ಸೆ ಸಿಗುತ್ತದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.