ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ೨,೯೦೦ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ವಾಹನಗಳ ಸಂಚಾರ ನಿರ್ವಹಣೆಗೆ ಬೆಂಗಳೂರಿನ ಸಂಚಾರ ಪೊಲೀಸರು ಬಂದಿದ್ದಾರೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ಬುಧವಾರ ಹುಬ್ಬಳ್ಳಿಯಲ್ಲಿ ಯುವಜನೋತ್ಸವ ನಡೆಯುವ ರೈಲ್ವೆ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ, ವಾಹನಗಳ ಸಂಚಾರದ ಮಾರ್ಗಗಳ ಬದಲಾವಣೆ ಮಾಡಲಾಗಿದೆ. ಪ್ರಧಾನಿ ಬರುವ ಮತ್ತು ತೆರಳುವ ಪೂರ್ವದ ಅರ್ಧ ಗಂಟೆ ಮಾತ್ರ ಅವರು ಸಂಚರಿಸುವ ಮಾರ್ಗದಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗುತ್ತದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಯಾವುದೇ ರೀತಿಯ ಪ್ರತಿಭಟನೆಗೆ, ಕಪ್ಪು ಬಟ್ಟೆ ಪ್ರದರ್ಶನಕ್ಕೆ ಅವಕಾಶವಿಲ್ಲ. ಯಾವುದೇ ಸಮಸ್ಯೆಗಳಿದ್ದರೂ ಕಮಿಷನರ್ ಅವರಿಗೆ ಮನವಿ ಸಲ್ಲಿಸಬೇಕು. ಸಮಾರಂಭದ ವೇಳೆ ಯಾರಾದರೂ ಪ್ರತಿಭಟನೆಗೆ ಮುಂದಾದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.