ಬೆಂಗಳೂರು : ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕೆಂದು ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ.
ಅಧಿವೇಶನ ಕುರಿತು ಇಂದು ಮಾಹಿತಿ ನೀಡಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು, ಇದು ಈ ವಿಧಾನಸಭೆಯ 15ನೆಯ ಮತ್ತು ಕೊನೆಯ ಅಧಿವೇಶನ ಆಗಿರುತ್ತದೆ. ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಕೊನೆಯ ಅಧಿವೇಶನ ಎಂದು ಯಾರೂ ನಿರ್ಲಕ್ಷಿಸದೇ ಪಾಲ್ಗೊಳ್ಳಿ ಎಂದು ಮನವಿ ಮಾಡಿಕೊಂಡರು.
ಫೆಬ್ರವರಿ 10 ರಿಂದ 24 ರವರೆಗೆ ವಿಧಾನಮಂಡಲ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಫೆಬ್ರವರಿ 9ರ ಬೆಳಗ್ಗೆ 6ರಿಂದ ಫೆಬ್ರವರಿ 24ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.
ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ಯಾವುದೇ ಅಡಚಣೆ ಆಗದಂತೆ ಈ ಕ್ರಮ ಕೈಗೊಳ್ಳಲಾಗಿದೆ. ವಿಧಾನಸೌಧದ ಸುತ್ತ 2 ಕಿಮೀ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಹೆಚ್. ಪ್ರತಾಪ್ ರೆಡ್ಡಿ ಪ್ರತಿಬಂಧಕಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.