ಬೆಳಗಾವಿ: ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಪ್ರಭಾವಿ ನಾಯಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಸೈಡ್‌ಲೈನ್ ಮಾಡೋ ಪ್ರಶ್ನೆಯೇ ಇಲ್ಲ. ಅವರಿಗೆ ಕೇಂದ್ರದಲ್ಲಿ ಎರಡು ಪ್ರಮುಖ ಸ್ಥಾನಗಳನ್ನು ನೀಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ 10 ಕ್ಷೇತ್ರದಲ್ಲಿ ಬಿಜೆಪಿ, 8ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಆಪರೇಷನ್ ಕಮಲ ಮೂಲಕ ಮೂರು ಜನ ಶಾಸಕರು ಬಿಜೆಪಿಗೆ ಬಂದಿದ್ದಾರೆ. ಈಗಿನ 13 ಸ್ಥಾನ ಉಳಿಸಿಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ. ಇಂದು ಕ್ಷೇತ್ರವಾರು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ನಡೆದಿದೆ. ಕ್ಷೇತ್ರದ ಸರ್ವೇ ಆಧರಿಸಿ ಟಿಕೆಟ್ ನೀಡಲಾಗುವುದು. ಏಪ್ರಿಲ್ 25ರಂದು ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಸಿಗಲಿದೆ. ಬಿಜೆಪಿ ರಾಜ್ಯದಲ್ಲಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳಿದರು.