ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಕಲ್ಲು ತೂರಾಟ ನಡೆದು 15ಕ್ಕೂ ಹೆಚ್ಚು ಕಾರುಗಳು ಜಖಂಗೊಂಡ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದಲ್ಲಿ ನಡೆದಿದೆ.
ಸುರಪುರದ ಹಾಲಿ ಶಾಸಕ ರಾಜೂಗೌಡ ಹಾಗೂ ಮಾಜಿ ಶಾಸಕ, ಕಾಂಗ್ರೆಸ್‌ನ ರಾಜಾ ವೆಂಕಟಪ್ಪ ನಾಯಕರ ನಡುವಿನ ಬಣಗಳ ಜಂಗೀಕುಸ್ತಿಗೆ ಇದು ಸಾಕ್ಷಿಯಾದಂತಾಗಿದೆ. ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಲ್ಕೈದು ಜನ ಕಾರ್ಯಕರ್ತರೂ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ, ಕೊಡೇಕಲ್ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ. ಸಿ.ಬಿ. ವೇದಾಮೂರ್ತಿ ಭೇಟಿ ನೀಡಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.