ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಮೇಲೆ ಪ್ರತಿಪಕ್ಷ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಬಸವರಾಜ ಬೊಮ್ಮಾಯಿ ಮತ್ತು ಬಿಬಿಎಂಪಿ ಆಯುಕ್ತರು ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೇಸ್ ಪಕ್ಷ ದೂರಿದೆ. ‘ಖಾಸಗಿ ಸಂಸ್ಥೆಯೊಂದು (ಎನ್‌ಜಿಒ) ಮತದಾರರ ಅಂಕಿಅಂಶಗಳನ್ನು (ಡಾಟಾ) ಅಕ್ರಮವಾಗಿ ಸಂಗ್ರಹಿಸುತ್ತಿದ್ದು, ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಕಾರಣ. ಅವರ ಮೇಲೆ ಎಫ್‌ಐಆರ್ ದಾಖಲಿಸಿ, ಬಂಧಿಸಬೇಕು. ಚುನಾವಣಾ ವ್ಯವಸ್ಥೆಯನ್ನೇ ಭ್ರಷ್ಟಗೊಳಿಸುವ ಈ ಅಪರಾಧದ ಬಗ್ಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗ್ರಹಿಸಿದರು.
‘ಡಾಟಾ ಸಂಗ್ರಹಿಸಲು ಚಿಲುಮೆ ಸಂಸ್ಥೆಗೆ ಬಿಬಿಎಂಪಿ ಅಧಿಕಾರಿಗಳು ಅವಕಾಶ ಮಾಡಿಕೊಟ್ಟಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೂಡಾ ಇದಕ್ಕೆ ಕಾರಣ. ಮಹದೇವಪುರ ಕ್ಷೇತ್ರದಲ್ಲಿ ಮೊದಲು ಮಾಹಿತಿ ಸಂಗ್ರಹಿಸಲಾಗಿದೆ. ಡಾಟಾ ಸಂಗ್ರಹಕ್ಕೆ ಆಗಸ್ಟ್ 20ರಂದು ಆದೇಶ ಹೊರಡಿಸಲಾಗಿದೆ. ಚಿಲುಮೆ ಸಂಸ್ಥೆಯವರು ಸರ್ಕಾರಿ ಅಧಿಕಾರಿಗಳೆಂದು ಮಾಹಿತಿ ಸಂಗ್ರಹಿಸಿದ್ದಾರೆ’ ಎಂದರು.