ಬೆಂಗಳೂರು: ವಿಧಾನಸೌಧದಲ್ಲಿ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು. ಸುಮಾರು 10.50 ಲಕ್ಷ ರೂಪಾಯಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಬುಧವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಒಬ್ಬ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಗೇಟ್ನಲ್ಲಿ ಪೊಲೀಸರು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಮಂಡ್ಯ ಮೂಲದ ಈ ವ್ಯಕ್ತಿಯಿಂದ ಬ್ಯಾಗ್ನಲ್ಲಿ ದೊಡ್ಡ ಮೊತ್ತದ ಹಣ ಇರುವುದು ಪತ್ತೆಯಾಗಿದೆ. ವ್ಯಕ್ತಿಯ ಬಳಿ ಹಣದ ಮೂಲದ ಕುರಿತಾಗಿ ಪೊಲೀಸರು ಪ್ರಶ್ನಿಸಿದಾಗ ಯಾವುದೇ ಸ್ಪಷ್ಟವಾದ ಮಾಹಿತಿಯನ್ನು ಆತ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು, ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.