ದಾವಣಗೆರೆ: ಉತ್ತರ ಕರ್ನಾಟಕದ ಪ್ರಭಾವಿ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ನಮ್ಮ ಪಕ್ಷಕ್ಕೆ ಬಲ ತಂದಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಷ್ಟೇ ಅಲ್ಲ, ನಮ್ಮ ಪಕ್ಷದ ಬಿ-ಫಾರಂ ಪಡೆದು, ವಿಧಾನಸಭೆ ಚುನಾವಣೆಯಲ್ಲೂ ಸ್ಪರ್ಧಿಸಲಿದ್ದಾರೆ. ಈ ಚುನಾವಣೆಯಲ್ಲಿ ಉತ್ತರ ಕರ್ನಾಟಕದಲ್ಲಿ ಅತೀ ಹೆಚ್ಚು ಕ್ಷೇತ್ರ ಗೆಲ್ಲಲಿದ್ದೇವೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವುದು ಖಚಿತ. ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ವಿವಿಧೆಡೆಯಿಂದ ಇನ್ನೂ ಅನೇಕ ನಾಯಕರು ಬರಲಿದ್ದಾರೆ. ಯಾರೆಲ್ಲಾ ಬರಲಿದ್ದಾರೆಂಬ ಎಂಬ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಕೇಳಿ ಎಂದು ಅವರು ತಿಳಿಸಿದರು.