ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ನೇಮಕಾತಿಗೆ ಸಂಬಂಧಿಸಿದಂತೆ ಭಾನುವಾರ ನಡೆಸಲಾದ ಕಂಪ್ಯೂಟರ್ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದಿರುವುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವಿಟ್ ಮೂಲಕ ವಿರೋಧಿಸಿದ್ದಾರೆ. ‘ಕೇಂದ್ರ ಸರ್ಕಾರ ಕೂಡಲೇ ಕನ್ನಡ ಸೇರಿದಂತೆ ದಕ್ಷಿಣದ ಪ್ರಾದೇಶಿಕ ಭಾಷೆಗಳಲ್ಲೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು’ ಎಂದು ಒತ್ತಾಯಿಸಿದ್ದಾರೆ.
‘ಪರೀಕ್ಷೆಯನ್ನು ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿ ಬರೆಯಬೇಕೆಂಬ ಕೇಂದ್ರದ ಅಧಿಸೂಚನೆಯಿಂದಾಗಿ ಕನ್ನಡ ಅಭ್ಯರ್ಥಿಗಳು ತಮ್ಮ ಸ್ವಂತ ರಾಜ್ಯದಲ್ಲೇ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ. ಇದಲ್ಲದೇ 100 ಪ್ರಶ್ನೆಗಳಲ್ಲಿ 25 ಪ್ರಶ್ನೆಗಳು ಹಿಂದಿ ಭಾಷೆಗೆ ಸಂಬಂಧಿಸಿದವುಗಳಾಗಿವೆ. ಪರೀಕ್ಷೆಯಲ್ಲಿ ಇಂಗ್ಲಿಷ್ ಅಥವಾ ಹಿಂದಿ ಭಾಷೆ ಕಡ್ಡಾಯಗೊಳಿಸಿರುವುದು ಏಕಪಕ್ಷೀಯ ಮಾತ್ರವಲ್ಲ, ತಾರತಮ್ಯವೂ ಹೌದು’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
9212 ಹುದ್ದೆಗಳಿಗೆ ಈ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಕರ್ನಾಟಕದ 466 ಹುದ್ದೆಗಳೂ ಸೇರಿವೆ. ದುರಂತವೆಂದರೆ, ಇಷ್ಟು ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಹಿಂದಿ,ಇಂಗ್ಲಿಷ್ ನಲ್ಲಿ ಪರೀಕ್ಷೆ ಬರೆದಿದ್ದಾರೆ, ಬರೆಯುವ ಅನಿವಾರ್ಯ ಸೃಷ್ಟಿಸಲಾಗಿದೆ. ಮಾತೃಭಾಷೆಯಲ್ಲಿ ಬರೆಯುವುದನ್ನು ನಿರಾಕರಿಸುವುದು ಎಂದರೆ ಸಂವಿಧಾನಕ್ಕೆ ಎಸಗಿದ ಅಪಚಾರ. ಕೇಂದ್ರ ಸರಕಾರ ತನ್ನ ಸುಪರ್ದಿಯಲ್ಲಿ ನಡೆಸುವ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷಿನಲ್ಲೇ ನಡೆಸುತ್ತಿದೆ. ಕೇವಲ ಹಿಂದಿ ಕೇಂದ್ರಿತ ನೇಮಕಾತಿ ಪ್ರಕ್ರಿಯೆ ಇತರೆ ಭಾಷಿಕರನ್ನು ಉದ್ಯೋಗ ವಂಚಿತರನ್ನಾಗಿಸುವುದು ಮಾತ್ರವಲ್ಲ, ಅನ್ಯಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶ. ಇದು ಸ್ಪಷ್ಟ. ತಮ್ಮ ರಾಜ್ಯಗಳಲ್ಲಿ ಉದ್ಯೋಗ ಪಡೆಯಲು ಅನ್ಯಭಾಷೆಯಲ್ಲಿ ಪರೀಕ್ಷೆ ಬರೆಯಬೇಕಾದ ಕರ್ಮ ದಕ್ಷಿಣ ಭಾರತ ರಾಜ್ಯಗಳ ಜನರದ್ದು. ಕನ್ನಡಿಗರೂ ಸೇರಿ ದಕ್ಷಿಣದ ಎಲ್ಲ ಭಾಷಿಕರು ಈ ಬಗ್ಗೆ ವಿರೋಧ ಮಾಡುತ್ತಲೇ ಇದ್ದರೂ ಕೇಂದ್ರ ಸರಕಾರ ಹಿಂದಿ ಹೇರಿಕೆಯನ್ನು ಮುಂದುವರಿಸಿದೆ. ಮುಲಾಜಿಲ್ಲದೆ ಸಿಆರ್ ಪಿಎಫ್ ನೇಮಕಾತಿಯ ಮರು ಪರೀಕ್ಷೆ ನಡೆಸಬೇಕು ಹಾಗೂ ಕನ್ನಡ ಸೇರಿ ದೇಶದ ಎಲ್ಲ ಭಾಷೆಗಳಲ್ಲೂ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಇಲ್ಲವಾದರೆ, ಈ ತಾರತಮ್ಯ ಹಾಗೂ ಹಿಂದಿ ಹೇರಿಕೆ ಇನ್ನೊಂದು ದೊಡ್ಡ ಹೋರಾಟಕ್ಕೆ ನಾಂದಿ ಆದೀತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.