ನವದೆಹಲಿ: ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ದೀಪಂಕರ್ ದತ್ತಾ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ನ್ಯಾ. ದತ್ತಾ ಅವರಿಗೆ ಬೆಳಗ್ಗೆ 10.36ಕ್ಕೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್ ಅವರು ಪ್ರಮಾಣವಚನ ಬೋಧಿಸಿದರು. ಇದರೊಂದಿಗೆ, ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ನ್ಯಾ. ದತ್ತಾ ಅವರು ಕೊಲ್ಕತ್ತ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಸಲೀಲ್ ಕುಮಾರ್ ದತ್ತಾ ಅವರ ಪುತ್ರ ಹಾಗೂ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಅಮಿತವ್ ರಾಯ್ ಅವರ ಸಹೋದರ.