ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರಕ್ಕೆ ಪಕ್ಷದ ವರಿಷ್ಠರು ನನಗೆ ಟಿಕೆಟ್ ನೀಡಿದ್ದಾರೆ. ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಲಿದ್ದು, ಗೆದ್ದು ಬರುತ್ತೇವೆ ಎಂದು ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ೩ನೇ ಪಟ್ಟಿಯಲ್ಲಿ ಸೆಂಟ್ರಲ್ ಕ್ಷೇತ್ರಕ್ಕೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಟೆಂಗಿನಕಾಯಿ ಅವರು ಆನಂದ ಬಾಷ್ಪ ಸುರಿಸಿದರು. ಅವರೊಂದಿಗೆ ಇದ್ದ ಪಕ್ಷದ ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ ಪಾಟೀಲ ಅವರು ಸಂತೋಷ ಹಂಚಿಕೊಂಡರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಟೆಂಗಿನಕಾಯಿಯವರು, ನನ್ನಂಥ ಸಾಮಾನ್ಯ ಕಾರ್ಯಕರ್ತನ ಶ್ರಮವನ್ನು ಗುರುತಿಸಿ ಪಕ್ಷ ಟಿಕೆಟ್ ಕೊಟ್ಟಿದೆ. ಕಾರ್ಯಕರ್ತರ ಮೇಲೆ ವಿಶ್ವಾಸವಿದೆ. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಅನ್ನೋದಕ್ಕೆ ಇದೇ ಸಾಕ್ಷಿ ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಮುಂದಿಟ್ಟುಕೊಂಡು ಜನರ ಮುಂದೆ ಹೋಗುತ್ತೇವೆ. ಖಂಡಿತ ಈ ಚುನಾವಣೆಯಲ್ಲಿ ಜಯಭೇರಿ ಬಾರಿಸುತ್ತೇವೆ ಎಂದು ಟೆಂಗಿನಕಾಯಿ ಭರವಸೆ ವ್ಯಕ್ತಪಡಿಸಿದರು.