ಶಿಮ್ಲಾ: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಸುಖ್ವಿಂದರ್ ಸಿಂಗ್ ಸುಖು ಅವರ ಹೆಸರು ಅಂತಿಮವಾಗಿದೆ ಎನ್ನಲಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಜನಾದೇಶದೊಂದಿಗೆ ಗೆದ್ದ ನಂತರವೂ, ಆರು ಬಾರಿ ಮುಖ್ಯಮಂತ್ರಿಯಾಗಿದ್ದ ವೀರಭದ್ರ ಸಿಂಗ್ ಅವರ ನಿಧನದಿಂದ ಉಂಟಾದ ಶೂನ್ಯವನ್ನು ತುಂಬಲು ಮತ್ತು ಮುಖ್ಯಮಂತ್ರಿ ಆಗುವ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕುರಿತು ಒಮ್ಮತಕ್ಕೆ ಬರುವುದಕ್ಕೆ ಕಾಂಗ್ರೆಸ್‌ಗೆ ಕಷ್ಟಕರವಾಗಿದೆ.
ರಾಜ್ಯ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ಸಿಂಗ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಮತ್ತು ಚುನಾವಣಾ ಪ್ರಚಾರ ಸಮಿತಿಯ ಮುಖ್ಯಸ್ಥ ಸುಖ್ವಿಂದರ್ ಸಿಂಗ್ ಸುಖು ಸೇರಿದಂತೆ ಹಲವು ನಾಯಕರು ವೀಕ್ಷಕರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಚರ್ಚಿಸಿದರು.
66 ವರ್ಷದ ಪ್ರತಿಭಾ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿರುವುದಾಗಿ ಸೂಚಿಸಿದ್ದು, ಇದನ್ನು ಅವರ ಪುತ್ರ ಕೂಡ ಸ್ಪಷ್ಟಪಡಿಸಿದ್ದಾರೆ.
ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸುಖು, ‘ನಾನು ಮುಖ್ಯಮಂತ್ರಿ ಆಕಾಂಕ್ಷಿಯಲ್ಲ, ನಾನು ಕೇವಲ ಕಾಂಗ್ರೆಸ್ ಕಾರ್ಯಕರ್ತ ಮತ್ತು ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುತ್ತೇನೆ’ ಎಂದು ಹೇಳಿದ್ದರು.