ರಾಣೇಬೆನ್ನೂರ: ರಾಷ್ಟ್ರ ಧರ್ಮವೇ ಶ್ರೇಷ್ಠ ಧರ್ಮವಾಗಿದೆ. ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ನಿಮಿತ್ತ ಪ್ರತಿಯೊಬ್ಬರೂ ಮನೆ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ತಾಲೂಕಿನ ಹಿರೇಬಿದರಿ ಗ್ರಾಮದಲ್ಲಿ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ನಿಮಿತ್ತ ಪಂಚಮಸಾಲಿ ಲಿಂಗಾಯತ ಸಮಾಜದ ಗ್ರಾಮೀಣ ಹಾಗೂ ನಗರ ಘಟಕದ ವತಿಯಿಂದ ಮನೆ ಮನೆಯ ಮೇಲೂ ತ್ರಿವರ್ಣ ಧ್ವಜ ಅಭಿಯಾನ ಹಾಗೂ ತುಂಗಭದ್ರಾ ನದಿಗೆ ಬಾಗಿನ ಅರ್ಪಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ದೊರೆತು 75 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಬಾರಿ ಅದ್ಭುತ ಹಾಗೂ ವಿಶೇಷ ರೀತಿಯಲ್ಲಿ ಸ್ವಾತಂತ್ರ್ಯ ದಿನ ಆಚರಿಸಲಾಗುತ್ತಿದೆ. ಈ ದಿಸೆಯಲ್ಲಿ ಕೇಂದ್ರ ಸರ್ಕಾರ ಹಲವಾರು ವಿಶೇಷ ಕಾರ್ಯಕ್ರಮ ಹಾಕಿಕೊಂಡಿದೆ. ಜನತೆ ಅವುಗಳನ್ನು ಯಶಸ್ವಿಗೊಳಿಸುವ ಮೂಲಕ ದೇಶದ ಪ್ರೇಮ ಮೆರೆಯಬೇಕು ಎಂದರು.
ಸಾನ್ನಿಧ್ಯ ವಹಿಸಿದ್ದ ಕೂಡಲ ಸಂಗಮದ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ದೇಶದ ಅನೇಕ ಹೋರಾಟಗಾರರ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದೆ. ಆದ್ದರಿಂದ ಎಲ್ಲರೂ ಸಂಭ್ರಮದಿಂದ ಸ್ವಾತಂತ್ರ್ಯ ದಿನ ಆಚರಣೆಗೆ ಮುಂದಾಗಬೇಕು ಎಂದರು.