ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಷ್ಟು ಉದ್ಯೋಗ ಸೃಷ್ಟಿಸಿದೆ ಎಂಬುದರ ದಾಖಲೆ ಬಿಡುಗಡೆ ಮಾಡಲಿ ಎಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಎಂದಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉದ್ಯಮಗಳ ಸ್ಥಾಪನೆ ಸಚಿವರ ಸಾಮಾಜಿಕ ಜಾಲತಾಣ ಖಾತೆಗಳಿಗಷ್ಟೇ ಸೀಮಿತವಾಗಿದೆ. ರಾಹುಲ್ ನಾಯಕತ್ವ ವಿಫಲವಾಗಿದೆ. ರಾಹುಲ್ ಗಾಂಧಿ ನಾಯಕತ್ವದಲ್ಲಿ ವಿಶ್ವಾಸ ಇಲ್ಲ, ಹಾಗಾಗಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜನರ ಹಾದಿ ತಪ್ಪಿಸುತ್ತಿದ್ದಾರೆ. ಆದರೆ ನಾವು ಮೋದಿ ಅವರ ಅಭಿವೃದ್ಧಿ ಕಾರ್ಯಗಳ ಮೇಲೆ ಚುನಾವಣೆ ಎದುರಿಸುತ್ತಿದ್ದೇವೆ, ಎರಡು ಕೋಟಿ ಜಾಬ್ ನೀಡಿದ್ರಾ ಎಂದು ಕಾಂಗ್ರೆಸ್ ಕೇಳುತ್ತದೆ. ನಾವು ಬಂದ ನಂತರ 2023ರ ತನಕ 7 ಕೋಟಿ ಉದ್ಯೋಗ ಸೃಷ್ಟಿ ಆಗಿದೆ. ಆದರೆ, ರಾಜ್ಯದಲ್ಲಿ ಸಿದ್ದರಾಮಯ್ಯ ಎಷ್ಟು ಉದ್ಯೋಗ ನೀಡಿದ್ದಾರೆ?. ಕೇವಲ ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಮಾತ್ರ ಉದ್ಯೋಗ ಸೃಷ್ಟಿಯಾಗಿದೆ. ಹತ್ತು ತಿಂಗಳಲ್ಲಿ ಒಂದೇ ಒಂದು ಉದ್ಯೋಗ ಕೊಡದಿರುವುದು ಸಿದ್ದರಾಮಯ್ಯ ಸರ್ಕಾರದ ದಾಖಲೆಯಾಗಿದೆ ಎಂದರು.