ಬೆಂಗಳೂರು: ಕರ್ನಾಟಕದ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಸಚಿವ ಉಮೇಶ್ ಕತ್ತಿ ನಿಧನದ ಸುದ್ದಿ ತಿಳಿದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆಸ್ಪತ್ರೆಗೆ ತೆರಳಿ ಪಾರ್ಥೀವ ಶರೀರದ ದರ್ಶನ ಪಡೆದಿದ್ದಾರೆ. ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ನಾಲ್ಕು ದಶಕಗಳಿಗೂ ಹೆಚ್ಚು ನಮ್ಮ ಮತ್ತು ಅವರ ಕುಟುಂಬದ ನಡುವೆ ಸಂಬಂಧವಿದೆ. ನಮ್ಮ ನಡುವೆ ಆತ್ಮೀಯ ಒಡನಾಟವಿತ್ತು. ಅವರೊಂದಿಗಿನ ಕ್ಷಣ ನೆನಪಾಗುತ್ತಿದೆ. ಅವರ ಪ್ರಮುಖ ರಾಜಕೀಯ ನಿರ್ಧಾರದಲ್ಲಿ ನಾನಿದ್ದೆ. ನನಗೆ ಅತ್ಯಂತ ಆತ್ಮೀಯರಾಗಿದ್ದರು ಎಂದು ಕಣ್ಣೀರು ಹಾಕಿದ್ದಾರೆ.
ಇನ್ನು ಟ್ವೀಟ್ ಮೂಲಕ ಸಂತಾಪ ಸೂಚಿಸಿರು ಸಿಎಂ ಬೊಮ್ಮಾಯಿ ಅವರು, ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ, ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.