ಮಂಡ್ಯ: ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಜನಶಕ್ತಿ, ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟ, ಮಹಿಳಾ ಮುನ್ನಡೆ ಸೇರಿದಂತೆ ಹಲವಾರು ಸಂಘಟನೆಗಳು ಶರತ್ತುಬದ್ದವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿರುವುದಾಗಿ .ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ಎಂ.ಸಿದ್ದರಾಜು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳಿಂದ ಅಧಿಕಾರ ನಡೆಸುತ್ತಿರುವ ಬಿಜೆಪಿ ,ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡಿಲ್ಲ. ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದ್ದರೂ ಇದನ್ನು ತಡೆಗಟ್ಟುವಲ್ಲಿ ವಿಫಲವಾಗಿದೆ. ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನವಿರೋಧಿ ಕಾನೂನುಗಳನ್ನು ಜಾರಿ ಮಾಡಿದೆ ಎಂದು ದೂರಿದರು.
ಬಿಜೆಪಿಯ ಅವಧಿಯಲ್ಲಿ ಭ್ರಷ್ಟಾಚಾರ, ಮೋಸ, ವಂಚನೆ, ಕೊಲೆ ಪ್ರಕರಣಗಳು ಜರುಗಿವೆ. ಹಾಗಾಗಿ ಜನರ ರಕ್ಷಣೆಗೆ ಮುಂದಾಗದ, ರೈತ, ಕಾರ್ಮಿಕ ,ಜನವಿರೋಧಿ ನೀತಿ ಅನುಸರಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷವನ್ನು ಸೋಲಿಸಲು ಕಾಂಗ್ರೆಸ್ ಪಕ್ಷಕ್ಕೆ ಷರತ್ತು ಬದ್ಧವಾಗಿ ಬೆಂಬಲ ನೀಡುತ್ತಿದ್ದು, ಮತದಾರರು ಸಹ ಬೆಂಬಲಿಸಬೇಕೆಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಪೂರ್ಣಿಮ, ಶ್ರಮಿಕ ಶಕ್ತಿ ಸಂಘಟನೆಯ ಕೃಷ್ಣ,ಜಗದೀಶ್,ಮಹಿಳಾ ಮುನ್ನಡೆ ಸಂಘಟನೆಯ ಶಿಲ್ಪಾ, ಉಪಸ್ಥಿತರಿದ್ದರು.