ಚಾಮುಂಡಿ ದೇವಿಗೆ ಹರಕೆ ತೀರಿಸಿದ ಸಿಎಂ, ಡಿಸಿಎಂ

Advertisement

ಮೈಸೂರು: ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದೇವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹರಿಕೆಯನ್ನು ತೀರಿಸಿದರು. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮೇ 9ರಂದು ಚಾಮುಂಡೇಶ್ವರಿ ಎದುರು ಅವರು ವಾಗ್ದಾನ ಮಾಡಿದ್ದರು. ಇದೀಗ ಆ ಬೇಡಿಕೆ ಈಡೇರಿದ್ದರಿಂದ ಹರಕೆ ತೀರಿಸಿದ್ದಾರೆ. ಕಾಂಗ್ರೆಸ್‌ನ ಮಹತ್ವಾಕಾಂಕ್ಷೆಯ ಯೋಜನೆಯಾದ ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ನಾಳೆ ಮೈಸೂರಿನಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದೆ. ಚಾಲನೆಗೂ ಮುನ್ನ ಇಂದು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಾಡಿನ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಾನಕ್ಕೆ ತೆರಳಿ, ಪೂಜೆ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ “ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆ ಮುಂಚಿತವಾಗಿ ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ನಾನು ಮತ್ತು ಸಿದ್ದರಾಮಯ್ಯ ಅವರು ಆಗಮಿಸಿ, ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್‌ಗಳನ್ನು ತೆಗೆದುಕೊಂಡು ಬಂದು ನಮ್ಮ ಗ್ಯಾರಂಟಿಗಳನ್ನು ಯೋಜನೆಯಾಗಿ ಅನುಷ್ಠಾನಕ್ಕೆ ತರುವ ಶಕ್ತಿಯನ್ನು ನೀಡಲಿ ಎಂದು ಸಂಕಲ್ಪ ಮಾಡಿದ್ದೇವು. ಮಹಾ ತಾಯಿ ಚಾಮುಂಡೇಶ್ವರಿ ದೇವಿಯ ಆಶೀರ್ವಾದದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಶಕ್ತಿಯನ್ನು ನೀಡಿದ್ದಾಳೆ. ರಾಜ್ಯದ 1.10 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯಾಗಿದ್ದಾರೆ. ಅವರಿಗೆ ನಮ್ಮ ಸರ್ಕಾರದ 100ನೇ ದಿನದ ಪ್ರಯುಕ್ತ ಆಗಸ್ಟ್‌ 30ರಂದು ತಾಯಿ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ನಾ ನಾಯಕಿಯರಿಗೆ ಹಣ ಬಿಡುಗಡೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ.


ಗೃಹಜ್ಯೋತಿ ಯೋಜನೆಗೆ 1.41 ಕೋಟಿ ಜನರು ನೋಂದಾಯಿಸಿಕೊಂಡಿದ್ದರು. ಈಗಾಗಲೇ 1.40 ಕೋಟಿ ಜನರಿಗೆ ಉಚಿತ ವಿದ್ಯುತ್ ಸಿಗುತ್ತಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ‘ಶಕ್ತಿ ಯೋಜನೆ’ಯಡಿ 46 ಕೋಟಿ ಮಹಿಳೆಯರು ಉಚಿತ ಪ್ರಯಾಣ ಪ್ರಯೋಜನ ಪಡೆದುಕೊಂಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ನೋಂದಾಯಿಸಿಕೊಂಡಿದ್ದ 1.39 ಕೋಟಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ, ಇನ್ನುಳಿದ 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನು ವಿತರಿಸಲಾಗಿದೆ.


ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದ 100 ದಿನದೊಳಗೆ ಅತ್ಯುತ್ತಮ ಕಾರ್ಯಕ್ರಮಗಳನ್ನು ನೀಡುವ ಮೂಲಕ ನುಡಿದಂತೆ ನಡೆದಿದ್ದೇವೆ. ಇದು ಕಾಂಗ್ರೆಸ್‌ ಸರ್ಕಾರದ ಸಾಧನೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ರಾಜ್ಯದ ಜನತೆಗೆ ನೀಡಿದ ಭರವಸೆಯನ್ನು ನುಡಿದಂತೆ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ. ರಾಜ್ಯದ ಜನತೆಯ ಸೇವೆ ಮಾಡಲು ನಮಗೆ ಶಕ್ತಿ ನೀಡಿರುವ ನಾಡಿನ ದೇವತೆಗೆ ನಮ್ಮ ನಮನಗಳನ್ನು ಸಲ್ಲಿಸಲು ಇಂದು ಚಾಮುಂಡೇಶ್ವರಿ ಸನ್ನಿಧಾನಕ್ಕೆ ಬಂದಿದ್ದೇವೆ ಎಂದರು.