ಹುಬ್ಬಳ್ಳಿ: ಪಕ್ಷದಲ್ಲಿ ಅಶಿಸ್ತಿನ ವಾತಾವರಣ ನಿರ್ಮಾಣ ಮಾಡಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅಭಿಮಾನಿ ಸಂಘದ ರಾಜ್ಯಾಧ್ಯಕ್ಷ ಗಿರೀಶ ಗದಿಗೆಪ್ಪಗೌಡರ್ ಅವರನ್ನು ಕಾಂಗ್ರೆಸ್ಸಿನಿಂದ ಆರು ವರ್ಷ ಉಚ್ಛಾಟನೆ ಮಾಡಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಗಿರೀಶ ಗದಿಗೆಪ್ಪಗೌಡ, ಕೆಪಿಸಿಸಿ ಉಪಾಧ್ಯಕ್ಷ ಪಿ.ವಿ. ಮೋಹನ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದರು. ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಕುಳಿತುಕೊಳ್ಳಲು ಕುರ್ಚಿ ಸಿಗದ ಕಾರಣಕ್ಕೆ ರಂಪಾಟ ಮಾಡಿದ್ದರು. ಅಲ್ಲದೆ, ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ರಾಹುಲ್ ಗಾಂಧಿ ಕಾರ್ಯಕ್ರಮದ ಖರ್ಚು ವೆಚ್ಚವನ್ನು ತಾವೇ ಭರಿಸಿರುವುದಾಗಿ ಸುಳ್ಳು ಹೇಳಿದ್ದರು. ಮತ್ತು ಧಾರವಾಡ ಜಿಲ್ಲೆಗೆ ರಾಜ್ಯ, ರಾಷ್ಟ್ರ ನಾಯಕರು ಬಂದಾಗ ಅವರಿಗೆ ಪದೇ ಪದೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರಿಂದ ಆರು ವರ್ಷ ಉಚ್ಛಾಟನೆ ಮಾಡಿ ಧಾರವಾಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹುಸೇನ್ ಹಳ್ಳೂರ ಆದೇಶ ಹೊಡಡಿಸಿದ್ದಾರೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವಲ್ಲಿ ಗಿರೀಶ ಗದಿಗೆಪ್ಪಗೌಡರ್ ಪ್ರಮುಖ ಪಾತ್ರ ವಹಿಸಿದ್ದರು.