ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಬಳಿ ಎತ್ತಿನಹೊಳೆ ಕಾಮಗಾರಿ ವೀಕ್ಷಣೆ ಆಗಮಿಸಿದ್ದು, ಈ ವೇಳೆ ಕಾಮಗಾರಿ ಪ್ರಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇನ್ನು ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಎತ್ತಿನಹೊಳೆ ಯೋಜನೆಯ ಕುರಿತು ಹೆಬ್ಬನಹಳ್ಳಿಯ ಪವರ್ ಗ್ರಿಡ್‌ನಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ, ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಸತ್ಯಭಾಮ, ಎಸ್‌ಪಿ ಹರಿರಾಮ್ ಶಂಕರ್, ಸಿಇಓ ಪೂರ್ಣಿಮಾ ಸೇರಿದಂತೆ ಹಲವು ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು. ಯೋಜನೆಯ ಕುರಿತು ಹಾಸನದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಯೋಜನೆ ಕಾಮಗಾರಿಯ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು ಪಶ್ಚಿಮಘಟ್ಟದಿಂದ ಕೋಲಾರದವರೆಗೆ ನೀರನ್ನು ಹರಿಸುವ ಯೋಜನೆಯನ್ನು ತಯಾರು ಮಾಡಿದ್ದೇವೆ. ಸುಮಾರು 24 ಸಾವಿರ ಕೋಟಿ ರೂಪಾಯಿ ವೆಚ್ಚದ ಯೋಜನೆ ಇದಾಗಿದ್ದು, ಈಗಾಗಲೇ 14 ಸಾವಿರ ಕೋಟಿ ರೂಪಾಯಿ ಯೋಜನೆಗಾಗಿ ಖರ್ಚು ಮಾಡಲಾಗಿದೆ.
ಈ ಯೋಜನೆಯ ಕಾಮಗಾರಿಯ ಪ್ರಗತಿ ಪರಿಶೀಲನೆ ವೇಳೆ ಕೆಲವು ವಿಷಯಗಳು ನನ್ನ ಗಮನಕ್ಕೆ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಮ್ಮದೇ ಕಾನೂನುಗಳನ್ನು ರೂಪಿಸುತ್ತಿದ್ದಾರೆ ಎನ್ನುವ ದೂರುಗಳು ಕೇಳಿ ಬಂದಿವೆ. ತಕ್ಷಣವೇ ಈ ಕುರಿತು ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ಅರಣ್ಯ ವ್ಯಾಪ್ತಿಯಲ್ಲಿ ಈ ಯೋಜನೆಯ ಕಾಮಗಾರಿ ನಡೆಯುತ್ತಿದ್ದು, ಅರಣ್ಯ ಇಲಾಖೆಯವರು ಕಾಮಗಾರಿಗೆ ಸಹಕರಿಸುವುದಾಗಿ ಒಪ್ಪಿಗೆ ಸೂಚಿಸಿದ್ದಾರೆ. ಆದಷ್ಟು ಬೇಗ ಈ ಯೋಜನೆ ಪೂರ್ಣಗೊಳಿಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.