ಬೆಂಗಳೂರು: ಇನ್ವೆಸ್ಟ್ ಕರ್ನಾಟಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸಹಿ ಹಾಕಲಾಗಿರುವ ಎಲ್ಲ ಬಂಡವಾಳ ಹೂಡಿಕೆಯ ಒಪ್ಪಂದಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಯೋಜನೆಗಳು ವಾಸ್ತವದಲ್ಲಿ ಕಾರ್ಯಗತಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ಅನುಮತಿಗಳನ್ನು ಹಾಗೂ ಸಹಕಾರವನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನ ಅರಮನೆ ಮೈದಾನದ ಆವರಣದಲ್ಲಿ ಇನ್ವೆಸ್ಟ್ ಕರ್ನಾಟಕ ಬಿಲ್ಡ್ ಫಾರ್ ದ ವರ್ಲ್ಡ್ 2022 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕೈಗಾರಿಕಾ ಸ್ನೇಹಿ ವಾತಾವರಣವನ್ನು ಸರ್ಕಾರ ನಿರ್ಮಿಸಲಿದೆ. ಈಗ ಕಾಗದದ ಮೇಲಿರುವ ಬಂಡವಾಳ, ವಾಸ್ತವವಾಗಬೇಕು. 2.8 ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಯೋಜನೆಗಳಿಗೆ ಈಗಾಗಲೇ ಅನುಮೋದನೆಯನ್ನು ಸರ್ಕಾರ ನೀಡಿದೆ. ಮುಂದಿನ ಮೂರು ತಿಂಗಳೊಳಗೆ ಮುಂದಿನ ಬಂಡವಾಳ ಹೂಡಿಕೆಯ ಯೋಜನೆಗಳ ಬಗ್ಗೆ ಸರ್ಕಾರ ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಿದೆ. ರಾಜ್ಯ ಸರ್ಕಾರ ಬಂಡವಾಳ ಹೂಡಿಕೆಯ ಬಗ್ಗೆ ಬಹಳ ಗಂಭೀರವಾಗಿದ್ದು, ಹೂಡಿಕೆದಾರರೂ ಸಹ ಇದೇ ಗಂಭೀರತೆಯನ್ನು ಹೊಂದಬೇಕಾಗುತ್ತದೆ ಎಂದರು.