ದಾವಣಗೆರೆ: ಬಜರಂಗದಳ ವಿಚಾರದಲ್ಲಿ ಕಾಂಗ್ರೆಸ್ ಮೂರ್ಖತನ ಮಾಡಿದ್ದು, ಮುಂಬರುವ ದಿನಗಳಲ್ಲಿ ಅವರಿಗೆ ತಕ್ಕ ಶಾಸ್ತಿ ಆಗಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆಯ ಜಿಎಂಐಟಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವುದಾಗಿ ಘೋಷಣೆ ಮಾಡಿರುವುದು ಬಹುಸಂಖ್ಯಾತ ಹಿಂದೂಗಳ ನಂಬಿಕೆಗೆ ನೋವುಂಟು ಮಾಡಿದೆ. ಅಲ್ಲದೇ, ಬಜರಂಗದಳ ನಮ್ಮ ದೇಶದ ಸಂಸ್ಕೃತಿ, ಸಂಪ್ರದಾಯ ಉಳಿಸಲು ಅದರದ್ದೇ ಆದ ಕೊಡುಗೆ ನೀಡಿದೆ. ಹೀಗಿರುವಾಗ ಕಾಂಗ್ರೆಸ್ ಬಜರಂಗದಳ ನಿಷೇಧಿಸುವುದಾಗಿ ಮೂರ್ಖತನ ತೋರಿದೆ ಎಂದರು.
ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತಾ ಷಾ ರೋಡ್ ಶೋ ಮಾಡಿದ ನಂತರ ವಾತವರಣ ಬದಲಾಗಿದ್ದು, ಬಿಜೆಪಿಗೆ ಮತ್ತಷ್ಟು ಬಲ ಬಂದಿದೆ. ಬಿಜೆಪಿ ಸ್ವತಂತ್ರ ಸರ್ಕಾರ ರಚನೆ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬಿಜೆಪಿ ಪರ ಒಳ್ಳೇಯ ವಾತಾವರಣ ನಿರ್ಮಾಣವಾಗಿದೆ. ನೂರರಕ್ಕೆ ನೂರಷ್ಟು ನಾವು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತೇವೆ. ರಾಜ್ಯದಲ್ಲಿ ೧೩೫ ಸೀಟು ಗೆದ್ದು ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ. ಯಾರ ಜೊತೆ ಹೊಂದಾಣಿಕೆ ಪ್ರಶ್ನೇಯೆ ಉದ್ಭವಿಸುವುದಿಲ್ಲ ಎಂದರು.