ಬರ ಪರಿಸ್ಥಿತಿಯ ಅಧ್ಯಯನ ಮಾಡಿ, ವರದಿ ನೀಡುವಂತೆ ಸಚಿವರಿಗೆ ಸಿಎಂ ಪತ್ರ

Advertisement

ಮೈಸೂರು: ಎಲ್ಲಾ ಜಿಲ್ಲಾ ಮಂತ್ರಿಗಳು ನವೆಂಬರ್ 15ರೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯ ಅಧ್ಯಯನ ಹಾಗೂ ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರ ಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ ಎಂದರು. ಕುಡಿಯುವ ನೀರು, ಉದ್ಯೋಗ ನೀಡುವುದು ಯಾವುದೂ ನಿಂತಿಲ್ಲ ಎಂದರು.
ನಾವು ಪತ್ರ ಬರೆದ ಮೇಲೆ 600 ಕೋಟಿ ರೂ.ಗಳನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ನಿನ್ನೆ ಹಣ ಬಿಡುಗಡೆ ಮಾಡಿದ್ದಾರೆ. 33 ಕೋಟಿ ರೂ.ಗಳಷ್ಟು ಹಾನಿಯಾಗಿದ್ದು, ಮಾರ್ಗಸೂಚಿ ಪ್ರಕಾರ 17,900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ. ಇವತ್ತಿನವರೆಗೆ ನಮ್ಮ ರಾಜ್ಯದ ಮಂತ್ರಿಗಳಿಗೆ ಕೇಂದ್ರ ಸಚಿವರು ಭೇಟಿಗೆ ಅವಕಾಶವನ್ನೇ ನೀಡಿಲ್ಲ. ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವರನ್ನು ಕಳುಹಿಸಲಾಗಿತ್ತು. ಮೂವರಿಗೆ ಭೇಟಿಗೆ ಅವಕಾಶ ನೀಡಿಲ್ಲ. ಪ್ರಧಾನಮಂತ್ರಿಗಳೂ ಸಮಯಾವಕಾಶ ನೀಡಿಲ್ಲದ ಕಾರಣ ಅವರ ಕೃಷಿ, ಕಂದಾಯ ಹಾಗೂ ಗೃಹ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಂದಿದ್ದಾರೆ ಎಂದರು.