ನವದೆಹಲಿ: ಬರ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರ್ಕಾರ ಹಣಕಾಸು ನೆರವು ನೀಡುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಇಂದು ಆಲಿಸಿದ ಸುಪ್ರೀಂಕೋರ್ಟ್. ರಾಜ್ಯದ ಬರ ಪರಿಹಾರ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ತಜ್ಞರ ಸಮಿತಿ ನೀಡಿದ ವರದಿಯನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಮುಂದಿನ ಸೋಮವಾರದೊಳಗೆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿತು. ಇಂದಿನ ವಿಚಾರಣೆಯಲ್ಲಿ ಕರ್ನಾಟಕ ಸರ್ಕಾರದ ಪರ ವಾದ ಮಂಡಿಸಿದ ಕಪಿಲ್ ಸಿಬಲ್, ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ ಅದಕ್ಕಾಗಿ ಧನ್ಯವಾದಗಳು. ಆದರೆ ಬಿಡುಗಡೆ ಮಾಡಿರುವ ಪರಿಹಾರದ ಮೊತ್ತ ಕಡಿಮೆಯಾಗಿದೆ ಇದು ಅಸಮಂಜಸ ಎಂದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೇಂದ್ರ ಸರ್ಕಾರ ಪರ ವಾದಿಸಿದ ಅರ್ಟಾನಿ ಜನರಲ್ ಆರ್ ವೆಂಕಟರಮಣಿ, ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಪರಿಹಾರ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.