ಬಿಟ್‌ಕಾಯಿನ್ ಹಗರಣ: ನಲಪ್ಪಾಡ್ ವಿಚಾರಣೆ

Advertisement

ಬೆಂಗಳೂರು: ಬಹುಕೋಟಿ ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿಯ ವಿಶೇಷ ತನಿಖಾ ದಳದ (ಎಸ್‌ಐಟಿ) ಪೊಲೀಸರು ಬುಧವಾರ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಹಾಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪ್ಪಾಡ್ ಅವರನ್ನು ವಿಚಾರಣೆ ನಡೆಸಿದ್ದಾರೆ.
ಬಿಟ್‌ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜತೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ನಲಪ್ಪಾಡ್ ಅವರಿಗೆ ಎಸ್‌ಐಟಿ ನೋಟಿಸ್ ನೀಡಿ ವಿಚಾರಣೆಗೆ ಕರೆಸಿಕೊಂಡಿತ್ತು. ವಿಚಾರಣೆ ವೇಳೆ ಬಿಟ್‌ಕಾಯಿನ್ ಹಗರಣ ಕುರಿತಂತೆ ತಮಗೆ ಯಾವುದೇ ಮಾಹಿತಿ ಇರಲಿಲ್ಲ. ೨೦೨೨ರಲ್ಲಿ ಶ್ರೀಕಿ ಬಂಧನದ ಬಳಿಕವಷ್ಟೇ ಈ ಬಗ್ಗೆ ತಮಗೆ ವಿಷಯ ತಿಳಿದಿತ್ತು. ಹೀಗಾಗಿ ಬಿಟ್‌ಕಾಯಿನ್ ಹಗರಣದಲ್ಲಿ ತಮ್ಮ ಪಾತ್ರ ಇಲ್ಲ ಹಾಗೂ ಶ್ರೀಕಿ ಜತೆ ಹಣಕಾಸು ವಹಿವಾಟು ನಡೆಸಿಲ್ಲ ಎಂದು ನಲಪ್ಪಾಡ್ ಸಮರ್ಥಿಸಿಕೊಂಡಿದ್ದಾರೆ ಎನ್ನಲಾಗಿದೆ. ವಿಚಾರಣೆಗೆ ಮತ್ತೆ ಕರೆದರೆ ಸಂಪೂರ್ಣ ಸಹಕಾರ ನೀಡುವುದಾಗಿ ನಲಪ್ಪಾಡ್ ಹೇಳಿದ್ದಾರೆ ಎಂದು ಸಿಐಡಿ ಮೂಲಗಳು ತಿಳಿಸಿವೆ.
ಈ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯೆ ಪಡೆಯಲು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ನಲಪ್ಪಾಡ್ ಅವರನ್ನು ಸತತ ಸಂಪರ್ಕಿಸಲು ಯತ್ನಿಸಿದರೂ ಅವರು ಪ್ರತಿಕ್ರಿಯೆ ನೀಡಿಲ್ಲ. ಎಸ್‌ಐಟಿ ಕೂಡ ವಿಚಾರಣೆ ಕುರಿತಂತೆ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.