ಬೆಂಗಳೂರು: ಶೇ.17ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿರುವುದನ್ನು ಒಪ್ಪಿಕೊಂಡಿರುವ ಸರ್ಕಾರಿ ನೌಕರರು ಅಂತಿಮವಾಗಿ ಮುಷ್ಕರವನ್ನು ಬುಧವಾರ ವಾಪಸ್ ಪಡೆದುಕೊಂಡಿದ್ದಾರೆ. ಶೇ.17ರಷ್ಟು ವೇತನ ಹೆಚ್ಚಳ ಮಾಡಿರುವುದಾಗಿ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ, ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ವಿಧಾನಸೌಧದಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿದ ಆದೇಶವನ್ನು ಪಡೆದುಕೊಂಡರು. ತಮ್ಮ ಬೇಡಿಕೆಗೆ ಸರ್ಕಾರ ಸಮ್ಮತಿ ಸೂಚಿಸಿದ ಹಿನ್ನೆಲೆಯಲ್ಲಿ ಮುಷ್ಕರ ಕೈಬಿಡಲು ನಿರ್ಧಾರ ಮಾಡಲಾಗಿದೆ. ಎಲ್ಲಾ ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರ ಸಂಘದ ಅಧ್ಯಕ್ಷ ಸಿ.ಎನ್ ಷಡಕ್ಷರಿ ಅವರು ಸೂಚನೆ ನೀಡಿದ್ದಾರೆ. ನಂತರ ಕಬ್ಬನ್ ಪಾರ್ಕ್ ನಲ್ಲಿರುವ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಮತಾನಾಡಿದ ಅವರು, ಮುಷ್ಕರವನ್ನು ವಾಪಸ್ ಪಡೆದುಕೊಳ್ಳುವುದಾಗಿ ತಿಳಿಸಿದರು.