ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಈಗಲಾದರೂ ವಾಪಸು ಪಡೆದು ಮಾನ ಉಳಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಮುಸ್ಲಿಂ ಮೀಸಲಾತಿ ರದ್ದತಿ ಬಗ್ಗೆ ಕರ್ನಾಟಕ ಸರ್ಕಾರ ಕೈಗೊಂಡಿರುವ ನಿರ್ಧಾರ ‘ದೋಷಪೂರಿತ’ ಮತ್ತು ‘ತಪ್ಪು ಕಲ್ಪನೆ’ಯನ್ನು ಆಧರಿಸಿದೆ. ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯ ಬುನಾದಿಯೇ ಅತ್ಯಂತ ಅಸ್ಥಿರವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿರುವುದು ರಾಜ್ಯ
ಬಿಜೆಪಿ ಸರ್ಕಾರ ತಲೆ ತಗ್ಗಿಸುವಂತೆ ಮಾಡಿದೆ.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಯನ ಆಧರಿತವಾದ ವರದಿ, ವಿಶ್ವಾಸಾರ್ಹ ಅಂಕಿ-ಅಂಶಗಳ ಸಂಗ್ರಹ ಹೀಗೆ ಯಾವುದೇ ತಯಾರಿ ಇಲ್ಲದೆ
ಬಿಜೆಪಿ ಸರ್ಕಾರ ಅತ್ಯವಸರದಿಂದ ಮುಸ್ಲಿಂ ಮೀಸಲಾತಿ ರದ್ದುಪಡಿಸಿರುವುದಕ್ಕೆ ಚುನಾವಣಾ ಲಾಭದ ದುರುದ್ದೇಶ ಬಿಟ್ಟರೆ ಬೇರೆ ಕಾರಣಗಳಿರಲಿಲ್ಲ ಎಂದಿದ್ದಾರೆ.