ಬೆಂಗಳೂರು: ಕಾಂಗ್ರೆಸ್ ಪಕ್ಷದ ತಾರಾಪ್ರಚಾರಕರಾಗಿರುವ ರಾಹುಲ್ಗಾಂಧಿ ಲೋಕಸಭಾ ಚುನಾವಣೆ ಘೋಷಣೆ ಬಳಿಕ ಇದೇ ಮೊದಲ ಬಾರಿಗೆ ಬುಧವಾರ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಸಕ್ಕರೆನಾಡು ಮಂಡ್ಯದಿಂದಲೇ ಪ್ರಚಾರದ ರಣಕಹಳೆ ಮೊಳಗಿಸಲಿದ್ದಾರೆ. ಬುಧವಾರ ಮಧ್ಯಾಹ್ನ ರಾಜ್ಯಕ್ಕೆ ಆಗಮಿಸುವ ಅವರು ಬಳಿಕ ಮಂಡ್ಯಕ್ಕೆ ತೆರಳಿ ಅಲ್ಲಿನ ವಿಶ್ವವಿದ್ಯಾಲಯ ಆವರಣದಲ್ಲಿ ಏರ್ಪಡಿಸಿರುವ ಪ್ರಜಾಧ್ವನಿ-೨ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ಚಂದ್ರು ಪರವಾಗಿ ಪ್ರಚಾರ ನಡೆಸಲಿದ್ದಾರೆ. ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಕ್ಷೇತ್ರಗಳನ್ನು ಒಳಗೊಂಡು ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರನ್ನು ಸೇರಿಸಲು ಸಿದ್ಧತೆ ನಡೆದಿದೆ.