ಬೆಳಗಾವಿ: ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡುವಂತಹ ಪರಿಸ್ಥಿತಿ ಸದ್ಯಕ್ಕೆ ಇಲ್ಲ. ಜುಲೈ 10ರ ಬಳಿಕ ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ಬೆಳಗಾವಿಯ ಸುವರ್ಣಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜು. 10ರ ನಂತರ ನಂತರ ಕೇಂದ್ರ ಸರಕಾರದ ಮಾರ್ಗಸೂಚಿ ಅನುಸರಿಸಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ರಾಜ್ಯದ ಕೆಲವೆಡೆ ಮುಂಗಾರು ಚುರುಕಾಗಿದೆ. ಆದರೆ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದೆ. ಸಮಸ್ಯೆ ಕಂಡು ಬಂದ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಆದೇಶ ನೀಡಲಾಗಿದೆ. ಮುಂದಿನ ಹತ್ತು ದಿನಗಳಲ್ಲಿ ಮುಂಗಾರು ಸುಧಾರಣೆಯಾಗುವ ನಿರೀಕ್ಷೆ ಹೊಂದಿದ್ದು ಉತ್ತಮ ಮಳೆಯಾಗಿ ಜಲಾಶಯ ಭರ್ತಿಯಾಗುವ ಆಶಾಭಾವನೆ ವ್ಯಕ್ತಪಡಿಸಿದರು.
ಸದ್ಯ 311 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಮತ್ತು 387 ಖಾಸಗಿ ಕೊಳವೆ ಬಾವಿಗಳ ಮೂಲಕವೂ ನೀರು ಪೂರೈಸಲಾಗುತ್ತಿದೆ. ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಂಬಂಧಿಸಿದಂತೆ ಸೂಕ್ತ ನಿಗಾವಹಿಸಲು ಕೂಡ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.