ಬೆಳಗಾವಿ: ಬಿಜೆಪಿ ಸರ್ಕಾರದಲ್ಲಿ ಆಗಿರುವ ಭ್ರಷ್ಟಾಚಾರದ ವಿರುದ್ಧ ಶಾಸಕ ಬಸನಗೌಡ ಯತ್ನಾಳ ಮಾತನಾಡಿರುವುದನ್ನೇ ಪಕ್ಷ ವಿರೋಧಿ ಹೇಳಿಕೆ ಎಂದು ಬಿಂಬಿಸಿ ಅವರನ್ನು ರಾಜಕೀಯವಾಗಿ ಹತ್ತಿಕ್ಕಲು ಪ್ರಯತ್ನಿಸುವುದು ಸರಿಯಲ್ಲ. ಹೀಗೆಯೇ ಮುಂದುವರೆದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾದೀತು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ ಅವರು ಮಾಡಿದ ಟೀಕೆ, ಆರೋಪಗಳ ಬಗ್ಗೆ ಬಿಜೆಪಿಯವರು ವಿಮರ್ಶೆ ಮಾಡಲಿ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಪಡೆಯುವ ನಿಟ್ಟಿನಲ್ಲಿ ಯತ್ನಾಳ ಹೋರಾಟ ಮಾಡುತ್ತಿದ್ದಾರೆ. ಅದೇ ಕಾರಣಕ್ಕೆ ಅವರನ್ನು ಹತ್ತಿಕ್ಕಲು ಪ್ರಯತ್ನ ನಡೆಸುತ್ತಿರುವುದು ಸರಿಯಲ್ಲ. ಸಮಾಜದಲ್ಲಿ ಯಾರಿಗೆ ನೋವಾದರೂ ನಾವು ಸಹಿಸುವುದಿಲ್ಲ. ಪಂಚಮಸಾಲಿ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವ ಸಂಬಂಧ ಪಕ್ಷದ ವರಿಷ್ಠರ ಬಳಿ ನಿಯೋಗ ತೆಗೆದುಕೊಂಡು ಹೋಗಲಾಗುವುದು. ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮಧ್ಯಪ್ರವೇಶಿಸಿ ಯತ್ನಾಳರಿಗೆ ನ್ಯಾಯ ದೊರಕಿಸಿಕೊಡುವ ತನಕವೂ ತಾವು ಸುಮ್ಮನಿರುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.