ಸಕ್ಕರೆ ನಾಡಿನಲ್ಲಿ ಕಾವೇರಿ ಕಿಚ್ಚು: ಹೆದ್ದಾರಿ ತಡೆಗೆ ಯತ್ನ : ರೈತರ ಬಂಧನ

Advertisement

ಮಂಡ್ಯ:- ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ತಾಲೂಕಿನ ಇಂಡುವಾಳು ಬಳಿ ಪ್ರತಿಭಟನೆ ನಡೆಸಿದ ರೈತರನ್ನು ಪೊಲೀಸರು ಬಂದಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ( ಮೂಲ ಸಂಘಟನೆ )ದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ಮಂಜೇಶ್ ಗೌಡ, ಸೊ.ಶಿ. ಪ್ರಕಾಶ್, ಬನ್ನೂರು ನಾರಾಯಣ, ಸಿದ್ದೇಗೌಡ, ಇ.ಬಸವರಾಜ್, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಮೇಶ್ ಗೌಡ ಸೇರಿ ನೂರಾರು ರೈತರನ್ನು ಪೊಲೀಸರು ಬಂದಿಸಿದ್ದಾರೆ.
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರು ಶಾಲಾ ಆವರಣ ದಿಂದ ಮೆರವಣಿಗೆ ಹೊರಟು ಸರ್ವಿಸ್ ರಸ್ತೆಯಲ್ಲಿ ಸಾಗಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್. ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ಜಿಲ್ಲಾ ಶಾಸಕರು ಮತ್ತು ಸಂಸದರ ವಿರುದ್ಧ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿರು. ಅರ್ಧ ತಾಸಿಗೂ ಹೆಚ್ಚು ಸಮಯ ವಾಹನ ಸಂಚಾರ ಅಸ್ತವ್ಯಸ್ತ ಉಂಟಾಗಿತ್ತು
ಘೋಷಣೆ ಮೊಳಗಿಸುತ್ತ ರೈತರು ಎಕ್ಸ್‌ಪ್ರೆಸ್‌ ಹೈವೆ ಗೆ ನುಗ್ಗಲು ಮುಂದಾದಾಗ ಪೊಲೀಸರು ತಡೆದರು.ಈ ವೇಳೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದು ಪರಸ್ಪರ ತಳ್ಳಾಟ- ನೂಕಾಟ ಉಂಟಾಗಿ ಪೊಲೀಸರು ಪ್ರತಿಭಟನಾ ನಿರತ ರೈತರನ್ನು ಬಲಪ್ರಯೋಗಿಸಿ ಬಂದಿಸಿದರು,ಈ ವೇಳೆ ಐದಾರು ರೈತರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಪೊಲೀಸರ ದೌರ್ಜನ್ಯದ ವಿರುದ್ಧ ಬಂದಿತ ರೈತರು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಪರ ಸಂಸತ್ತಿನಲ್ಲಿ ದನಿ ಎತ್ತಬೇಕಾದ ಸಂಸದ ಸುಮಲತಾ ಅಂಬರೀಶ್ ಬೀದಿ ಗಿಳಿದು ಹೋರಾಟ ಮಾಡುವ ಮೂಲಕ ರೈತರನ್ನು ದಿಕ್ಕುತಪ್ಪಿಸುತ್ತಿದ್ದಾರೆ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದವರು ಬೀದಿಗಿಳಿದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ನೀರನ್ನೆಲ್ಲ ತಮಿಳುನಾಡಿಗೆ ಹರಿಸಿ ಇದೀಗ ಸರ್ವ ಪಕ್ಷ ಸಭೆ ಕರೆದು ರೈತರ ಪರ ಮೊಸಳೆ ಕಣ್ಣೀರು ಸುರಿಸಲು ಮುಂದಾಗಿದೆ ಎಂದು ಕಿಡಿಕಾರಿದರು.
ಕಾವೇರಿ ಕಣಿವೆ ಜಲಾಶಯಗಳಿಂದ ನೀರು ಬಿಡುವ ಮುನ್ನ ಎಚ್ಚೆತ್ತು ಕೊಂಡು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮುಂದಾಗದೆ, ಏಕಾಏಕಿ ನೀರು ಬಿಟ್ಟು, ಜಲಾಶಯಗಳನ್ನು ಬರಿದು ಮಾಡಿ, ಕುಡಿಯುವ ನೀರಿಗೂ ತತ್ವಾರ ತಂದು ಇದೀಗ ರೈತರ ಕಣ್ಣಿಗೆ ಮಣ್ಣೆರೆಚುವ ಕೆಲಸಕ್ಕೆ ಮುಂದಾಗಿದೆ ಎಂದು ದೂರಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ನೇತೃತ್ವದಲ್ಲಿ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿತ್ತು