ಸಮಸ್ಯೆ ಹೇಳಲು ಬಂದ ಮಹಿಳೆಗೆ ವಸತಿ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ.
ಹಂಗಳ ಗ್ರಾಮಸ್ಥರಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮಕ್ಕೆ ಮೊದಲೇ ತಡವಾಗಿ ಬಂದಿದ್ದ ಸಚಿವ ಸೋಮಣ್ಣ ಅವರ ಬಳಿ ಮಹಿಳೆ ಸಮಸ್ಯೆ ಹೇಳಿಕೊಳ್ಳಲು ಬಂದಿದ್ದಾಳೆ. ಆ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಂಡ ಸಚಿವ ಸೋಮಣ್ಣ ಆಕೆಯ ಕಪಾಳಕ್ಕೆ ಬಾರಿಸಿದ್ದಾರೆ. ಬಳಿಕ ಆ ಮಹಿಳೆ ಸಚಿವರ ಕಾಲಿಗೆ ಬಿದ್ದು ಬೇಡಿಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಇನ್ನು ಸಚಿವರು ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಇನ್ನು ಈ ಬಗ್ಗೆ ಮಾತನಾಡಿದ ಸಚಿವ ವಿ. ಸೋಮಣ್ಣ, ನಿನಗೆ ಆದ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಕೈಯಲ್ಲಿ ಪಕ್ಕಕ್ಕೆ ಸರಿಸಿದ್ದೇನೆ ಅಷ್ಟೇ ವಿನಃ ಬೇರೆ ಉದ್ದೇಶ ಇಲ್ಲ. ನನಗೆ ಹೆಣ್ಣು ಮಕ್ಕಳ ಬಗ್ಗೆ ಅಪಾರ ಗೌರವ, ಮಮಕಾರ ಇದೆ. ಆ ಮಹಿಳೆಗೆ ಹಕ್ಕುಪತ್ರ ಕೊಡಿಸಿದ್ದೇನೆ. ಇದರಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ವಿಷಾದ ವ್ಯಕ್ತಪಡಿಸಿದರು.