ಧಾರವಾಡ: ಇಲ್ಲಿಯ ಕೃಷಿ ವಿಶ್ವವಿದ್ಯಾಲಯ ಸೆಪ್ಟೆಂಬರ್ 17ರಿಂದ 20ರ ವರೆಗೆ "ರೈತರ ಆದಾಯ ದ್ವಿಗುಣಗೊಳಿಸಲು ಕೃಷಿ ತಾಂತ್ರಿಕತೆಗಳು" ಎಂಬ ಶೀರ್ಷಿಕೆಯಡಿಯಲ್ಲಿ ಕೃಷಿಮೇಳ ಆಯೋಜಿಸುತ್ತಿದೆ. ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ. ಆರ್.ಬಸವರಾಜಪ್ಪ ಅವರು, ಮೇಳದಲ್ಲಿ ಕೃಷಿ ಹಾಗೂ ಕೃಷಿ ಪೂರಕ ತಂತ್ರಜ್ಞಾನಗಳೊಂದಿಗೆ
ಬೀಜ ಮೇಳ’ ಆಯೋಜಿಸಲಾಗಿದೆ. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಆವರಣಗಳಲ್ಲಿ ಕೈಗೊಂಡ ಬೋಧನೆ, ಸಂಶೋಧನೆ ಹಾಗೂ ವಿಸ್ತರಣಾ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ರೈತ ಸಮುದಾಯಕ್ಕೆ ಒದಗಿಸಲಾಗುವುದು. ಅಲ್ಲದೇ ವಿಶ್ವವಿದ್ಯಾಲಯದಿಂದ ಬಿಡುಗಡೆಯಾದ ತಂತ್ರಜ್ಞಾನಗಳ ಬಗ್ಗೆ ರೈತರಿಗೆ ಕ್ಷೇತ್ರ ಪ್ರಯೋಗ ಹಾಗೂ ಪ್ರಾತ್ಯಕ್ಷಿಕೆ ಆಯೋಜಿಸಲಾಗಿದೆ ಎಂದು ವಿವರಿಸಿದರು.
ಎಲ್ಲ ಕೃಷಿ ತಂತ್ರಜ್ಞಾನಗಳ ಮಾಹಿತಿಯನ್ನು ಕೃಷಿ ಮೇಳದ ಮುಖಾಂತರ ಅಲ್ಪ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರಿಗೆ ತಲುಪಿಸುವುದು ಈ ಮೇಳದ ಮುಖ್ಯ ಉದ್ದೇಶವಾಗಿದೆ. ನಾಲ್ಕು ದಿನಗಳ ಈ ಮೇಳದಲ್ಲಿ ಸುಮಾರು 10 ಲಕ್ಷ ರೈತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಸೆ. 18ರಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೃಷಿಮೇಳ ಉದ್ಘಾಟಿಸಲಿದ್ದು, ಕೇಂದ್ರ ಸಚವ ಪ್ರಲ್ಹಾದ ಜೋಶಿ ಪಾಲ್ಗೊಳ್ಳುವರು. ಕೃಷಿ ಸಚಿವ ಬಿ.ಸಿ.ಪಾಟೀಲ ಕೃಷಿ ಪ್ರಕಟಣೆಗಳನ್ನು ಬಿಡುಗಡೆ ಮಾಡಲಿದ್ದು, ಶಾಸಕ ಅಮೃತ ದೇಸಾಯಿ ಅಧ್ಯಕ್ಷತೆ ವಹಿಸುವರು.