ದಾವಣಗೆರೆ: ಬರುವ ಜುಲೈ 3ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜು.7 ಕ್ಕೆ ಬಜೆಟ್ ಮಂಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ಚರ್ಚೆ ನಡೆಸಿ ನಂತರ ಜು.7 ಕ್ಕೆ ಬಜೆಟ್ ಮಂಡಿಸುತ್ತೇವೆ ಎಂದರು. ಕೃಷಿ ಚಟುವಟಿಕೆಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ, ಕೀಟ ನಾಶಕಗಳನ್ನು ಪೂರೈಸುವಂತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಪಂ ಸಿಇಓಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಪ್ರವಾಹ ಬರದಿರಲಿ ಎಂದೇ ಹಾರೈಸುತ್ತೇವೆ. ಆದರೆ, ಹಾಗೊಂದು ವೇಳೆ ಪ್ರವಾಹ ಬಂದರೆ ಎದುರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಆಯಾ ಜಿಲ್ಲೆಯ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು. ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿ ವಿದ್ಯುತ್ ದರ ಪರಿಷ್ಕರಣೆಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಸ್ತಾವ ಸಲ್ಲಿಸಿತ್ತು. ಹಾಗಾಗಿ, ನಾವು ಈಗ ಅನುಮೋದನೆ ಕೊಟ್ಟಿದ್ದೇವಷ್ಟೇ ಎಂದು ವಿದ್ಯುತ್ ದರ ಹೆಚ್ಚಳ ಮಾಡಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.
ಗೋಹತ್ಯೆ ಕಾಯ್ದೆ ವಾಪಸ್ ಪಡೆಯುವ ವಿಷಯಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಸಿದ್ದರಾಮಯ್ಯ, 1964 ರಲ್ಲಿಯೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಿದೆ. ಆ ಪ್ರಕಾರ 12 ವರ್ಷ ತುಂಬಿದ ರಾಸುಗಳು ಮತ್ತು ವ್ಯವಸಾಯಕ್ಕೆ ಅನುಕೂಲಕ್ಕೆ ಬಾರದ ರಾಸು ಮುಕ್ತಗೊಳಿಸಲಾಗಿತ್ತು. ಬಿಜೆಪಿ ಸರ್ಕಾರ ಕಾಯ್ದೆ ತಿದ್ದುಪಡಿ ಮಾಡಿ ಜಾರಿಗೆ ತಂದಿತ್ತು. ಈಗ ಕ್ಯಾಬಿನೆಟ್ ನಲ್ಲಿ ನಾವು ಚರ್ಚೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.