ಶ್ರೀರಂಗಪಟ್ಟಣ: ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಶ್ರೀರಂಗಪಟ್ಟಣದಲ್ಲಿ ರೈತ ಮುಖಂಡರು ಪಂಜು ಹಿಡಿದು ಪ್ರತಿಭಟನೆ ನಡೆಸಿದರು.
ಪಟ್ಟಣದ ಕುವೆಂಪು ವೃತ್ತದ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರೈತ ಮುಖಂಡ ಕೆ.ಎಸ್. ನಂಜುಂಡೇಗೌಡ ಹಾಗೂ ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣೇಗೌಡ ನೇತೃತ್ವದಲ್ಲಿ 50ಕ್ಕೂ ಹೆಚ್ಚು ರೈತ ಮುಖಂಡರು ಹೆದ್ದಾರಿಯಲ್ಲಿ ಪಂಜು ಹಿಡಿದು ಪ್ರತಿಭಟನೆ ನಡೆಸಿದರು.
ಕಾವೇರಿ ನಿರ್ವಹಣಾ ಪ್ರಾಧಿಕಾರ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧವೂ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಹಿತ ಕಾಯಬೇಕಿದ್ದ ರಾಜ್ಯ ಸರ್ಕಾರ, ತಮಿಳುನಾಡಿನ ಒತ್ತಡಕ್ಕೆ ಮಣಿದು ನೀರು ಹರಿಸುವ ಮೂಲಕ ರಾಜ್ಯದ ರೈತರಿಗೆ ಹಾಗೂ ಜನತೆಗೆ ಅನ್ಯಾಯ ಮಾಡುತ್ತಿರುವುದಾಗಿ ಕಿಡಿಕಾರಿದರು.