ಶ್ರೀರಂಗಪಟ್ಟಣ: ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಕರ್ನಾಟಕ ರಾಜ್ಯಕ್ಕೆ ಪದೇ ಪದೇ ಅನ್ಯಾಯವಾಗುತ್ತಿದ್ದು, ಒಕ್ಕೂಟದ ವ್ಯವಸ್ಥೆಯಲ್ಲಿ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ನಮಗೆ ನ್ಯಾಯ ಒದಗಿಸಿಕೊಡಬೇಕೆಂದು ಶ್ರೀರಂಗಪಟ್ಟಣದಲ್ಲಿ ರೈತ ಮುಖಂಡರು ಪತ್ರ ಚಳುವಳಿ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.
ಭೂಮಿತಾಯಿ ಹೋರಾಟ ಸಮಿತಿ ವತಿಯಿಂದ ರೈತ ಮುಖಂಡ ಕೆ.ಎಸ್. ನಂಜುಂಡೇಗೌಡ ಹಾಗೂ ಸಮಿತಿ ಅಧ್ಯಕ್ಷ ಬಲ್ಲೇನಹಳ್ಳಿ ಕೃಷ್ಣೇಗೌಡ ನೇತೃತ್ವದಲ್ಲಿ ನೂರಾರು ರೈತರು ತಮ್ಮ ಸಹಿಯನ್ನೊಳಗೊಂಡ ಮನವಿಯನ್ನು ಅಂಚೆ ಮೂಲಕ ರಾಷ್ಟ್ರಪತಿಗಳಿಗೆ ರವಾನಿಸಿದರು.
ಒಕ್ಕೂಟದ ವ್ಯವಸ್ಥೆಯಲ್ಲಿ ನಮ್ಮ ನಾಡಿನಲ್ಲಿ ಹುಟ್ಟುವ ಕಾವೇರಿ ನೀರನ್ನು ನಾವು ಬಳಸಿಕೊಳ್ಳಲಾಗದಂತಹ ಪರಿಸ್ಥಿತಿಯಿರುವುದಾಗಿ ಅಂಚೆ ಕಚೇರಿ ಎದುರು ತಮಿಳುನಾಡು ಹಾಗೂ ರಾಜ್ಯ ಸರ್ಕಾರದ ವಿರುದ್ಧ ರೈತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.