ಚಿಕ್ಕಮಗಳೂರು: ರಾಜ್ಯ ಸರ್ಕಾರ ಮುಸಲ್ಮಾನರ ತುಷ್ಟೀಕರಣಕ್ಕೆ ಮುಂದಾಗಿದ್ದು, ರಾಜ್ಯದ ಜನತೆ ತೊಂದರೆ ಅನುಭವಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದರು.
ನೈರುತ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಸಭೆ ನಡೆಸಲು ನಗರಕ್ಕೆ ಭಾನುವಾರ ಆಗಮಿಸಿದ್ದ ಅವರು, ಖಾಸಗಿ ಹೋಟೆಲ್ ಆದ್ರಿಕಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಕೊಲೆ ಪ್ರಕರಣಗಳು ನಡೆದಿದ್ದರೆ, ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವಪ್ಪಿದ್ದು, ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಹಲವು ಮಂದಿ ಪೊಲೀಸರಿಗೆ ಗಾಯಗಳಾಗಿವೆ ಎಂದರು.
ಕಾಂಗ್ರೆಸ್ ಪಕ್ಷ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದು ೧ ವರ್ಷವಾಗಿದ್ದು, ಸಾಧನೆ ಶೂನ್ಯವಾಗಿದೆ. ಅಭಿವೃದ್ಧಿ ಕೆಲಸಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ರಾಜ್ಯದ ಜನತೆ ಭ್ರಮನಿರಸನಗೊಂಡಿದ್ದಾರೆ. ಅಭಿವೃದ್ಧಿ ಕೆಲಸಕ್ಕಾಗಿ ಮುಖ್ಯಮಂತ್ರಿಗಳು ಯಾವುದೇ ಗುದ್ದಲಿ ಪೂಜೆ ನೆರವೇರಿಸಿಲ್ಲ. ಗ್ಯಾರಂಟಿ ಗುಂಗಿನಲ್ಲೇ ಮುಳುಗಿ ದ್ದಾರೆಂದು ಟೀಕಿಸಿದರು.
ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಮೇಲೆ ರಾಜ್ಯ ಸರ್ಕಾರಕ್ಕೆ ಅರಿವಾಗಲಿದೆ. ರಾಜ್ಯ ಸರ್ಕಾರ ಎನ್.ಇ.ಪಿ. ರದ್ದುಪಡಿಸಿದ್ದು, ಎಸ್‌ಇಪಿ ಜಾರಿಗೊಳಿಸುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಹದಗೆಡಿಸಿದ್ದಾರೆಂದು ಕಿಡಿಕಾರಿದರು.