ಬೆಂಗಳೂರು: ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ರಚಿಸಿರುವ ಟಿಪ್ಪು ನಿಜ ಕನಸುಗಳು ಪುಸ್ತಕ ಮಾರಾಟಕ್ಕೆ ವಿಧಿಸಿದ್ದ ತಾತ್ಕಾಲಿಕ ನಿರ್ಬಂಧವನ್ನು ತೆರವುಗೊಳಿಸಿದೆ. ಬೆಂಗಳೂರು ಜಿಲ್ಲಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಬಿ.ಎಸ್. ರಫಿವುಲ್ಲಾ ಸಲ್ಲಿಸಿದ್ದ ಪ್ರಕರಣ ಆಕ್ಷೇಪಿಸಿದ್ದ ಪ್ರತಿವಾದಿಗಳ ವಾದವನ್ನು 15ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ಜೆ.ಆರ್. ಮೆಂಡೋನ್ಸಾ ಅವರ ನೇತೃತ್ವದ ಪೀಠವು ಮಾನ್ಯ ಮಾಡಿದೆ.
ನ್ಯಾಯಾಲಯದ ಆದೇಶದಿಂದಾಗಿ ಕೃತಿಕಾರ ಅಡ್ಡಂಡ ಕಾರ್ಯಪ್ಪ, ಪುಸ್ತಕ ಪ್ರಕಟಿಸಿರುವ ಅಯೋಧ್ಯಾ ಪ್ರಕಾಶನ, ಪುಸ್ತಕ ಮುದ್ರಿಸಿರುವ ರಾಷ್ಟ್ರೋತ್ಥಾನ ಮುದ್ರಣಾಲಯವನ್ನು ಪುಸ್ತಕ ಹಂಚಿಕೆ ಮತ್ತು ಮಾರಾಟ ಮಾಡದಂತೆ ನ್ಯಾಯಾಲಯವು ನಿರ್ಬಂಧಿಸಿದ್ದ ಆದೇಶವು ತೆರವುಗೊಂಡಂತಾಗಿದೆ.
ಮಧ್ಯಂತರ ಆದೇಶ ವಿಸ್ತರಿಸುವಂತೆ ಕೋರಿ ದೂರುದಾರರು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಲಾಗಿದೆ. 2022ರ ನವೆಂಬರ್ 21 ರಂದು ನ್ಯಾಯಾಲಯ ಮಾಡಿದ್ದ ಮಧ್ಯಂತರ ಆದೇಶವನ್ನು ತೆರವು ಮಾಡಲಾಗಿದೆ ಎಂದು ಪೀಠವು ಆದೇಶದಲ್ಲಿ ತಿಳಿಸಿದೆ.